ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೈಸೂರು: ಜೆಡಿಎಸ್ ಅಭ್ಯರ್ಥಿಯಾಗಿ ಜಾಫರ್ ಷರೀಫ್ ಕಣಕ್ಕೆ?

ಮಾಜಿ ಕೇಂದ್ರ ಸಚಿವ ಸಿ.ಕೆ. ಜಾಫರ್ ಷರೀಫ್ ಅವರು ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಒಂದು ಹೆಜ್ಜೆ ಹೊರಗಿಟ್ಟಿದ್ದು, ಜೆಡಿಎಸ್ ಸೇರುವುದು ಬಹುತೇಕ ಖಚಿತವಾಗಿದೆ.

Lingaraj Badiger
Updated On : 18 Mar 2014, 3:36 am

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ತಮಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ್ದರಿಂದ ಆಕ್ರೋಶಗೊಂಡಿರುವ ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಸಿ.ಕೆ. ಜಾಫರ್ ಷರೀಫ್ ಅವರು ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಒಂದು ಹೆಜ್ಜೆ ಹೊರಗಿಟ್ಟಿದ್ದು, ಜೆಡಿಎಸ್ ಸೇರುವುದು ಬಹುತೇಕ ಖಚಿತವಾಗಿದೆ.

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವ ಜಾಫರ್ ಷರೀಫ್ ಅವರು ಪ್ರಸ್ತುತ ಮೆಕ್ಕಾ ಯಾತ್ರೆಗೆ ತೆರಳಿದ್ದು, ಅಲ್ಲಿಂದ ಬಂದ ನಂತರ ಜೆಡಿಎಸ್ ಸೇರುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ಜಾಫರ್ ಷರೀಫ್ ಅವರನ್ನು ಜೆಡಿಎಸ್‌ಗೆ ಸ್ವಾಗತಿಸಿರುವ ದೇವೇಗೌಡರು, ಮೈಸೂರು ಲೋಕಸಭಾ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಸಲಹೆ ನೀಡಿದ್ದಾರೆ. ಮೈಸೂರು ಕ್ಷೇತ್ರದಲ್ಲಿ ಮುಸ್ಲಿಮರು, ಒಕ್ಕಲಿಗರು ಹಾಗೂ ನಾಯಕ ಸಮುದಾಯದ ಮತದಾರರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ದೇವೇಗೌಡರು ಷರೀಫ್‌ಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಮೈಸೂರು ಲೋಕಸಭಾ ಕ್ಷೇತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾಲಿಗೆ ಪ್ರತಿಷ್ಠೆಯ ಕಣವಾಗಿದ್ದು, ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ಎಚ್.ವಿಶ್ವನಾಥ್ ಅವರು ಸ್ಪರ್ಧಿಸುತ್ತಿದ್ದಾರೆ. ಸ್ವಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರಾಭವಗೊಂಡರೆ ಪಕ್ಷಕ್ಕೆ ಮಾತ್ರವಲ್ಲ, ಸಿದ್ದರಾಮಯ್ಯ ಅವರಿಗೂ ಮುಖಭಂಗವಾಗುತ್ತದೆ. ಹೀಗಾಗಿ ವಿಶ್ವನಾಥ್ ಅವರ ಗೆಲುವಿಗಾಗಿ ಸಿಎಂ ಸಿದ್ದರಾಮಯ್ಯ ಎಲ್ಲ ರೀತಿಯ ಕಸರತ್ತು ಮಾಡಬೇಕಾಗಿದೆ.

ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಪಕ್ಷದ ಪರಾಭವದಿಂದ ಕುದಿಯುತ್ತಿರುವ ದೇವೇಗೌಡರು ಸೇಡು ತಿರಿಸಿಕೊಳ್ಳಲು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖಭಂಗ ಉಂಟು ಮಾಡಲು ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸೂಕ್ತ ಅಭ್ಯರ್ಥಿಗಾಗಿ ಹುಡುಕಾಟ ನಡೆಸಿದ್ದರು. ಇದಕ್ಕೆ ಸರಿಯಾಗಿ ಜಾಫರ್ ಷರೀಫ್ ಅವರ ಬಂಡಾಯ ದೇವೇಗೌಡರ ಪಾಲಿಗೆ ರೊಟ್ಟಿ ಜಾರಿ ತುಪ್ಪದಲ್ಲಿ ಬಿದ್ದಂತಾಗಿದೆ.

ಮೈಸೂರು ಕ್ಷೇತ್ರಕ್ಕೆ ಷರೀಫ್ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸುವುದರ ಜತೆಗೆ ಅವರ ಗೆಲುವಿಗಾಗಿ ಅನುಸರಿಸಬೇಕಾದ ತಂತ್ರಗಳ ಬಗ್ಗೆ ದೇವೇಗೌಡರು ಈಗಾಗಲೇ ಕಾರ್ಯೋನ್ಮುಖರಾಗಿದ್ದಾರೆ. ಈ ಸಂಬಂಧ ಮೈಸೂರು ಮತ್ತು ಕೊಡಗು ಜಿಲ್ಲೆಯ ಪಕ್ಷದ ಮುಖಂಡರ ಜತೆಗೆ ಹಲವಾರು ಸುತ್ತಿನ ಮಾತುಕತೆ ನಡೆಸಿದ್ದಾರೆ.

ಇನ್ನು ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪತ್ರಕರ್ತ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡಿದ್ದು, ಇದು ಪಕ್ಷದ ಸ್ಥಳೀಯ ಮುಖಂಡರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಬಿಜೆಪಿ ವರಿಷ್ಠರು ಕ್ಷೇತ್ರಕ್ಕೆ, ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಪರಿಚಿತರಲ್ಲದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡಿರುವುದು ತಪ್ಪು ನಿರ್ಧಾರ ಎಂದು ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಸೇರಿದಂತೆ ಹಲವು ಮುಖಂಡರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜತೆಗೆ ಇತ್ತೀಚಿಗೆ ಬೆಳಕಿಗೆ ಬಂದ ಮಾಜಿ ಸಚಿವ ಎ.ರಾಮದಾಸ್ ಅವರ ಪ್ರೇಮ ಪ್ರಕರಣದಿಂದ ಸ್ಥಳೀಯ ಬಿಜೆಪಿ ಕಾರ್ಯಕರ್ತರು ನೈತಿಕವಾಗಿ ಕುಗ್ಗಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ಲಾಭ ಪಡೆಯಲು ಮುಂದಾಗಿರುವ ದೇವೇಗೌಡರು, ಈ ಕ್ಷೇತ್ರದಿಂದ ಅಲ್ಪಸಂಖ್ಯಾತ ಮುಖಂಡ ಜಾಫರ್ ಷರೀಫ್ ಅವರನ್ನು ಕಣಕ್ಕಿಳಿಸಲು ಸರ್ವ ಯತ್ನ ನಡೆಸಿದ್ದಾರೆ. ದೇವೇಗೌಡರ ಈ ಪ್ರಯತ್ನ ಕೈಗೂಡಿದರೆ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಪಕ್ಷಗಳಿಗಿಂತ ದೇವೇಗೌಡ ಮತ್ತು ಸಿಎಂ ಸಿದ್ದರಾಮಯ್ಯ ಅವರ ನಡುವೆ ನೇರ ಹೋರಾಟ ನಡೆಯುವುದು ಸ್ಪಷ್ಟ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement