ಲೋಕಸಮರ: ಕಣದಲ್ಲಿ 6 ಮಾಜಿ ಸಿಎಂಗಳು, ಯಾರಾಗ್ತಾರೆ ಸಂಸದರು?
ಆರು ಮಂದಿ ಮಾಜಿ ಮುಖ್ಯಂತ್ರಿಗಳು ಈ ಬಾರಿ ಲೋಕಸಭಾ ಚುನಾವಣಾ ಕಣದಲ್ಲಿದ್ದು, ರಾಜ್ಯದ ಐದು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ..
ಬೆಂಗಳೂರು: ಆರು ಮಂದಿ ಮಾಜಿ ಮುಖ್ಯಂತ್ರಿಗಳು ಈ ಬಾರಿ ಲೋಕಸಭಾ ಚುನಾವಣಾ ಕಣದಲ್ಲಿದ್ದು, ರಾಜ್ಯದ ಐದು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಆರು ಮಾಜಿ ಸಿಎಂಗಳು ವಿಶೇಷ ಗಮನ ಸೆಳೆದಿದ್ದಾರೆ. ಆರು ಮಾಜಿ ಸಿಎಂಗಳ ಪೈಕಿ ಯಾರೂ ಮತ್ತೆ ಸಂಸದರಾಗಿ ಆಯ್ಕೆಯಾಗುತ್ತಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಮತ್ತೊಂದು ವಿಶೇಷ ಎಂದರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳು ನೇರಾನೇರ ಎದುರಾಳಿಗಳಾಗಿದ್ದಾರೆ.
ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಡಿ.ವಿ.ಸದಾನಂದಗೌಡ, ಕಾಂಗ್ರೆಸ್‌ನಿಂದ ಎಂ. ವೀರಪ್ಪ ಮೊಯಿಲಿ ಹಾಗೂ ಎನ್.ಧರ್ಮಸಿಂಗ್, ಜೆಡಿಎಸ್‌ನಿಂದ ಎಚ್.ಡಿ.ದೇವೇಗೌಡ ಹಾಗೂ ಅವರ ಪುತ್ರ ಎಚ್.ಡಿ.ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಸಹಜವಾಗಿಯೇ ಇವರು ಸ್ಪರ್ಧಿಸುತ್ತಿರುವ ಶಿವಮೊಗ್ಗ, ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ಬೀದರ್ ಹಾಗೂ ಹಾಸನ ಲೋಕಸಭಾ ಕ್ಷೇತ್ರಗಳು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿವೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಚುನಾವಣಾ ಕಣದಲ್ಲಿರುವ ಐವರು ಮಾಜಿ ಮುಖ್ಯಮಂತ್ರಿಗಳು ಈಗಾಗಲೇ ಒಂದೆರಡು ಬಾರಿ ಸಂಸತ್ತಿಗೆ ಆಯ್ಕೆಯಾಗಿದ್ದಾರೆ. ಆದರೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತ್ರ ಇನ್ನು ಸಂಸತ್ ಪ್ರವೇಶಿಸಿಲ್ಲ. ಈ ಹಿಂದೆ 1991ರಲ್ಲಿ ಒಂದು ಬಾರಿ ಶಿವಮೊಗ್ಗದಿಂದ ಸ್ಪರ್ಧಿಸಿ, ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಹತ್ತಿರದ ಸಂಬಂಧಿ ಶಿವಪ್ಪ ಅವರ ವಿರುದ್ಧ ಪರಾಭವಗೊಂಡಿದ್ದರು. ಈಗ ಮತ್ತೆ ಎರಡನೇ ಬಾರಿ ಬಂಗಾರಪ್ಪ ಅವರ ಪುತ್ರಿ ಹಾಗೂ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ವಿರುದ್ಧ ಅದೇ ಶಿವಮೊಗ್ಗ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಿದ್ದು, ಈ ಬಾರಿಯಾದರೂ ಅವರು ಸಂಸತ್ ಸದಸ್ಯರಾಗಿ ಆಯ್ಕೆಯಾಗುತ್ತಾರೆಯೇ ಎಂಬುದು ಕಾದು ನೋಡಬೇಕು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಅವರ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಿದ್ದಾರೆ. ಈ ಮೊದಲು ಮೊಯಿಲಿ ವಿರುದ್ಧ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಮುಂದಾಗಿದ್ದ ಕುಮಾರಸ್ವಾಮಿ, ಈಗ ಪತ್ನಿಯ ಬದಲಾಗಿ ತಾವೇ ಸ್ಪರ್ಧಿಸುತ್ತಿದ್ದಾರೆ. ಒಬ್ಬ ಮಾಜಿ ಸಿಎಂ ವಿರುದ್ಧ ಮತ್ತೊಬ್ಬ ಮಾಜಿ ಸಿಎಂ ಆಖಾಡಕ್ಕಿಳಿದಿರುವುದರಿಂದ ಸಹಜವಾಗಿಯೇ ಚಿಕ್ಕಬಳ್ಳಾಪುರ ಕ್ಷೇತ್ರ ಈ ಬಾರಿ ರಾಜಕೀಯವಾಗಿ ಮಹತ್ವ ಪಡೆದಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ.ಎನ್. ಬಚ್ಚೇಗೌಡ ಹಾಗೂ ಸಿಪಿಎಂ ಅಭ್ಯರ್ಥಿಯಾಗಿ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಅವರು ಸ್ಪರ್ಧಿಸುತ್ತಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕುಮಾರಸ್ವಾಮಿ, ನಂತರ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅವರ ರಾಜಿನಾಮೆಯಿಂದ ತೆರವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನೇ ಕಣಕ್ಕಿಳಿಸಿದ್ದರೂ ಕಾಂಗ್ರೆಸ್ ಎದುರು ಸೋಲು ಅನುಭವಿಸಬೇಕಾಯಿತು. ಪ್ರಸ್ತುತ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಇಂದಿನಷ್ಟು ರಾಜಕೀಯವಾಗಿ ಪ್ರಬಲವಾಗಿಲ್ಲದಿರುವುದರಿಂದ ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸಹ ಪ್ರಧಾನಿಯಾಗುವುದಕ್ಕಿಂತ ಮೊದಲು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. 1994ರಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಜೂನ್ 1996ರವರೆಗೆ ಅವರು ಸಿಎಂ ಆಗಿದ್ದರು. ಬಳಿಕ ಪ್ರಧಾನಿಯಾದರು. ದೇವೇಗೌಡರು ಈ ಬಾರಿಯೂ ತಮ್ಮ ಸ್ವಕ್ಷೇತ್ರ ಹಾಸನದಲ್ಲೇ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ಹಿಂದೆ ಅವರು ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ತೇಜಸ್ವಿನಿ ರಮೇಶ್ ಅವರ ವಿರುದ್ಧ ಪರಾಭವಗೊಂಡಿದ್ದರು.
ಉಡುಪಿ-ಚಿಕ್ಕಮಗಳೂರು ಸಂಸದರಾಗಿದ್ದ ಸದಾನಂದಗೌಡ ಮುಖ್ಯಮಂತ್ರಿಯಾದ ಬಳಿಕ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಈ ಬಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ. ಈ ಮುಂಚೆ ಅವರು ಮಂಗಳೂರು ಮತ್ತು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಆದರೆ ಮುಖ್ಯಮಂತ್ರಿಯಾದ ನಂತರ ತೆರವಾದ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಗೆಲ್ಲಿಸಿಕೊಳ್ಳುವಲ್ಲಿ ಅವರು ವಿಫಲವಾಗಿದ್ದರು.
2004ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎನ್.ಧರ್ಮಸಿಂಗ್ ಅವರು ಬೀದರ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿದ್ದು, ಮರು ಆಯ್ಕೆ ಬಯಸಿ ಮತ್ತೆ ಆಖಾಡಕ್ಕಿಳಿದಿದ್ದಾರೆ.