ದಾವಣಗೆರೆ ಜೆಡಿಎಸ್ ಅಭ್ಯರ್ಥಿಯಾಗಿ ಮಹಿಮಾ ಪಟೇಲ್ ಕಣಕ್ಕೆ
ಮಾಜಿ ಮುಖ್ಯಮಂತ್ರಿ ದಿ.ಜೆ.ಎಚ್.ಪಟೇಲ್ ಅವರ ಪುತ್ರ..
ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ಜೆ.ಎಚ್.ಪಟೇಲ್ ಅವರ ಪುತ್ರ ಹಾಗೂ ಚೆನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಮಹಿಮಾ ಪಟೇಲ್ ಅವರು ಶುಕ್ರವಾರ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
ಮಹಿಮಾ ಪಟೇಲ್ ಅವರು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಸಚಿವ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಿದ್ದರಿಂದ ತೀವ್ರ ಅಸಮಾಧಾನಗೊಂಡಿದ್ದ ಮಹಿಮಾ ಪಟೇಲ್ ಈಗ ಕಾಂಗ್ರೆಸ್ ತೊರೆದು ಮಾತೃಪಕ್ಷ ಜೆಡಿಎಸ್ ಸೇರಿದ್ದಾರೆ.
ದಾವಣಗೆರೆಯಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಹಿಮಾ ಪಟೇಲ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಮಹಿಮಾ ಪಟೇಲ್ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಜೆ.ಎಂ.ಸಿದ್ದೇಶ್ ಅವರು ಸ್ಪರ್ಧಿಸುತ್ತಿದ್ದಾರೆ.