ಬಿಜೆಪಿಗೆ ಮುತಾಲಿಕ್ ಸೇರ್ಪಡೆ ರದ್ದು
ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕರ ಸದಸ್ಯತ್ವ ರದ್ದುಗೊಳಿಸುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್...
ನವದೆಹಲಿ: ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕರ ಸದಸ್ಯತ್ವ ರದ್ದುಗೊಳಿಸುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಅವರು ರಾಜ್ಯ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ.
ಸ್ವಪಕ್ಷ ನಾಯಕರಿಂದಲೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಸೇರ್ಪಡೆ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ರಾಜನಾಥ್ ಸಿಂಗ್ ಸೂಚಿಸಿದ್ದಾರೆ.
ಇಂದು ಹುಬ್ಬಳಿಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ನಾಯಕರ ಸಮ್ಮುಖದಲ್ಲಿ ಮುತಾಲಿಕ್ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇದಕ್ಕೆ ಬಿಜೆಪಿಯಿಂದಲೇ ತೀವ್ರ ವಿರೋಧ ವ್ಯಕ್ತವಾಗಿತ್ತು. ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಹಾಗೂ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಅವರು ಪ್ರಮೋದ್ ಮುತಾಲಿಕ್ ಅವರನ್ನು ಬಿಜೆಪಿಗೆ ಸೇರಿಸಿಕೊಂಡಿರುವುದು ಸರಿಯಲ್ಲ ಹಾಗೂ ಅವರ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿಲು ಒತ್ತಾಯಿಸಿದ್ದಾರೆ.
ಮುತಾಲಿಕ್ ಬಿಜೆಪಿಗೆ ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ನೋಡಿಕೊಳ್ಳುತ್ತಿರುವ ತಾವರ್‌ಚಂದ್ ಗೆಹ್ಲೋಟ್ ಹಾಗೂ ಬಿಜೆಪಿ ರಾಜ್ಯ ನಾಯಕರ ಜೊತೆ ದೂರವಾಣಿ ಮೂಲಕ ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಚರ್ಚೆ ನಡೆಸಿ, ಮುತಾಲಿಕ್ ಸೇರ್ಪಡೆಯನ್ನು ರದ್ದುಗೊಳಿಸುವಂತೆ ಸೂಚಿಸಿದ್ದಾರೆ.
ಮಂಗಳೂರಿನ ಪಬ್ ಮೇಲೆ ಶ್ರೀರಾಮಸೇನೆ ಕಾರ್ಯಕರ್ತರು ದಾಳಿ ಮಾಡಿ ಪಬ್‌ನಲ್ಲಿ ತಂಗಿದ್ದ ಯುವಕ ಯುವತಿಯರ ಮೇಲೆ ಅನುಚಿತವಾಗಿ ವರ್ತಿಸಿ ಅವರ ಮೇಲೆ ಹಲ್ಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮುತಾಲಿಕ್ ಸೇರ್ಪಡೆಗೆ ವಿರೋಧ ವ್ಯಕ್ತವಾಗಿತ್ತು.