ಚುನಾವಣೆಗೆ 'ಕೈ' ರಣತಂತ್ರ: ಕೃಷ್ಣ ನಿವಾಸಕ್ಕೆ ಸಿಎಂ ಭೇಟಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್ನ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರ..
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್ನ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಗುರುವಾರ ಭೇಟಿ ನೀಡಿ, ಲೋಕಸಭೆ ಚುನಾವಣಾ ಪ್ರಚಾರದ ಕುರಿತು ಚರ್ಚಿಸಿದರು.
ಇಂದು ಬೆಳಗ್ಗೆ ಸದಾಶಿವನಗರದಲ್ಲಿರುವ ಕೃಷ್ಣ ಅವರ ನಿವಾಸಕ್ಕೆ ತೆರಳಿದ ಸಿದ್ದರಾಮಯ್ಯ, ಚುನಾವಣಾ ರಣತಂತ್ರದ ಕುರಿತು ಚರ್ಚಿಸಿದರು ಎನ್ನಲಾಗಿದೆ. ಈ ವೇಳೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಉಪಸ್ಥಿತರಿದ್ದರು.
ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷ್ಣ, ಕರ್ನಾಟಕದಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯ ಅಲೆ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅತಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದರು. ಅಲ್ಲದೆ ಏಪ್ರಿಲ್ 1ರಿಂದ ಮಂಡ್ಯ ಲೋಕಸಭಾ ಕ್ಷೇತ್ರ ಸೇರಿದಂತೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ವ್ಯಾಪಕ ಪ್ರಚಾರ ಕೈಗೊಳ್ಳುವುದಾಗಿ ತಿಳಿಸಿದರು.