ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲೂ ಮುತಾಲಿಕ್ ನಾಮಪತ್ರ ಸ್ವೀಕೃತ
ಬೆಂಗಳೂರು: ಇತ್ತೀಚೆಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿ ಅದೇ ದಿನ ಪಕ್ಷದಿಂದ ಹೊರದಬ್ಬಿಸಿಕೊಂಡ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಧಾರವಾಡ ಉತ್ತರ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಎರಡೂ ಕ್ಷೇತ್ರಗಳಲ್ಲಿ ಅವರ ನಾಮಪತ್ರ ಸ್ವೀಕೃತವಾಗಿದೆ.
ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಷಿ ಅವರು ಸ್ಫರ್ಧಿಸುತ್ತಿರುವ ಧಾರವಾಡ ಉತ್ತರ ಕ್ಷೇತ್ರದಲ್ಲಿ ಖುದ್ದಾಗಿ ನಾಮಪತ್ರ ಸಲ್ಲಿಸಿದ್ದ ಮುತಾಲಿಕ್ ಅವರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ ಕುಮಾರ್ ಅವರು ಸ್ಪರ್ಧಿಸುತ್ತಿರುವ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾರ್ಯಕರ್ತರ ಮೂಲಕ ನಾಮಪತ್ರ ಸಲ್ಲಿಸಿದ್ದರು.
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮುತಾಲಿಕ್ ಅವರು ಸಲ್ಲಿಸಿರುವ ನಾಮಪತ್ರದಲ್ಲಿ ತಾಂತ್ರಿಕ ದೋಷಗಳಿದ್ದು, ಅವರ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ಸ್ಥಳೀಯ ಬಿಜೆಪಿ ಮುಖಂಡರು ತಕರಾರು ಅರ್ಜಿ ಸಲ್ಲಿಸಿದ್ದರು. ಇಂದು ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ ಬಿಜೆಪಿ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ತಿರಸ್ಕರಿಸಿರುವ ಚುನಾವಣಾ ಅಧಿಕಾರಿಗಳು ಮುತಾಲಿಕ್ ಅವರ ನಾಮಪತ್ರವನ್ನು ಸ್ವೀಕರಿಸಿ ಆದೇಶ ಹೊರಡಿಸಿದರು. ನಾಮಪತ್ರ ಹಿಂಪಡೆಯಲು ಮಾರ್ಚ್ 29 ಕೊನೆಯ ದಿನವಾಗಿದ್ದು, ಮುತಾಲಿಕ್ ಅವರು ಎರಡು ಕ್ಷೇತ್ರಗಳಲ್ಲೂ ಸ್ಪರ್ಧಿಸುತ್ತಾರೋ ಇಲ್ಲವೋ? ಎಂಬುದು ಅಂದು ಸ್ಪಷ್ಟವಾಗಲಿದೆ.
ಬಿಜೆಪಿಗೆ ತಮ್ಮನ್ನು ಸೇರಿಸಿಕೊಂಡು ನಂತರ ಹೊರಹಾಕಿದ ಪ್ರಕರಣದಿಂದ ಆಕ್ರೋಶಗೊಂಡಿರುವ ಮುತಾಲಿಕ್ ಅವರು, ತಮಗಾದ ಅವಮಾನದ ಸೇಡನ್ನು ತೀರಿಸಿಕೊಳ್ಳುವ ಉದ್ದೇಶದಿಂದ ಪ್ರಹ್ಲಾದ್ ಜೋಷಿ ಮತ್ತು ಅನಂತ್ ಕುಮಾರ್ ವಿರುದ್ಧ ಸ್ಪರ್ಧೆಗೆ ಮುಂದಾಗಿದ್ದಾರೆ.