ಸಿದ್ದು ಸಂಪುಟದಲ್ಲಿ ರೆಡ್ಡಿಗಿಂತ ಭ್ರಷ್ಟ ಸಚಿವರಿದ್ದಾರೆ: ದೇವೇಗೌಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗಿಂತ ಹೆಚ್ಚು ಭ್ರಷ್ಟರು ಸಚಿವರಾಗಿದ್ದಾರೆ ..
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗಿಂತ ಹೆಚ್ಚು ಭ್ರಷ್ಟರು ಸಚಿವರಾಗಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದೇವೇಗೌಡ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಡಿ.ಕೆ.ಶಿವಕುಮಾರ್ ಅವರು ನನ್ನ ಮತ್ತು ಪುತ್ರ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೀಳು ಮಟ್ಟದ ಟೀಕೆ ಮಾಡುತ್ತಿದ್ದಾರೆ ಎಂದರು. ಅಲ್ಲದೆ ಶಿವಕುಮಾರ್ ದಲಿತರ ಜಮೀನನ್ನು ಕೊಳ್ಳೆಹೊಡೆದಿದ್ದಾರೆ ಎಂದು ಆರೋಪಿಸಿದರು.
ಇದೇ ವೇಳೆ ಡಿಕೆಶಿ ಹಗರಣವನ್ನು ಸಿಬಿಐ ತನಿಖೆಗೆ ಏಕೆ ವಹಿಸಬಾರದು ಮತ್ತು ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಡಿಕೆಶಿ ವಿರುದ್ಧ ಯಾವ ಕ್ರಮ ತೆಗೆದುಕೊಂಡಿದ್ದಿರಿ ಎಂದು ಸಿಎಂ ಸಿದ್ದುರನ್ನು ಮಾಜಿ ಪ್ರಧಾನಿ ಪ್ರಶ್ನಿಸಿದರು.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ರಾಜಕೀಯ ಪಕ್ಷಗಳು ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇದನ್ನು ತಪ್ಪಿಸಬೇಕಾಗಿದೆ ಎಂದು ದೇವೇಗೌಡರು ಹೇಳಿದರು.