ಕಾರವಾರ: ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ ಶಿವಾನಂದ್ ನಾಯಕ್
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ್ ನಾಯಕ್ ಅವರು ಶನಿವಾರ ಚುನಾವಣಾ
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಮಾಜಿ ಸಚಿವ ಶಿವಾನಂದ್ ನಾಯಕ್ ಅವರು ಶನಿವಾರ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.
ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಶಿವಾನಂದ್ ನಾಯಕ್ ಅವರು ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದು, ತಾವು ನಾಮಪತ್ರ ಹಿಂಪಡೆಯಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಶಾಸಕ ಮಧು ಬಂಗಾರಪ್ಪ ಕಾರಣ ಎಂದು ಆರೋಪಿಸಿದ್ದಾರೆ.
ನಾಮಪತ್ರ ಹಿಂಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಾನಂದ್ ನಾಯಕ್, ನಾನು ಜೆಡಿಎಸ್ ಸೇರ್ಪಡೆಯಾದಾಗ ನನಗೆ ಚುನಾವಣೆಯಲ್ಲಿ ಸಹಕಾರ ನೀಡುವುದಾಗಿ ಕುಮಾರಸ್ವಾಮಿ ಹಾಗೂ ಮಧು ಬಂಗಾರಪ್ಪ ಭರವಸೆ ನೀಡಿದ್ದರು. ಆದರೆ ಈಗ ಇಬ್ಬರೂ ತಮಗೆ ಯಾವುದೇ ರೀತಿಯ ಸಹಕಾರ ನೀಡುತ್ತಿಲ್ಲ ಮತ್ತು ಮೊಬೈಲ್‌ಗೆ ಕರೆ ಮಾಡಿದರೂ ಫೋನ್ ಸ್ವೀಕರಿಸುತ್ತಿಲ್ಲ ಎಂದು ದೂರಿದ್ದಾರೆ.
ಕಳೆದ ಎರಡು ಚುನಾವಣೆಗಳಲ್ಲಿ ನಾನು ಸೋಲು ಅನುಭವಿಸಿದ್ದೇನೆ. ಈ ಎರಡು ಸೋಲಿನಿಂದಾಗಿ ತಾವು ಈಗ ಆರ್ಥಿಕ ಸಂಕಷ್ಟದಲ್ಲಿದ್ದು, ಈ ಬಾರಿ ಚುನಾವಣಾ ಕರ್ಚಿಗೆ ತಮ್ಮ ಬಳಿ ಹಣ ಇಲ್ಲ. ಹೀಗಾಗಿ ತಾವು ಸ್ಪರ್ಧೆಯಿಂದ ಹಿಂದೆ ಸರಿಯುತ್ತಿರುವುದಾಗಿ ಶಿವಾನಂದ್ ನಾಯಕ್ ತಿಳಿಸಿದ್ದಾರೆ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 26 ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಈಗ ಮತ್ತೊಬ್ಬ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುವುದರಿಂದ ಜೆಡಿಎಸ್ ಭಾರಿ ಹಿನ್ನಡೆಯಾದಂತಾಗಿದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಚಿವ ಆರ್.ವಿ.ದೇಶಪಾಂಡೆ ಅವರ ಪುತ್ರ ಪ್ರಶಾಂತ್ ದೇಶಪಾಂಡೆ ಹಾಗೂ ಬಿಜೆಪಿಯಿಂದ ಅನಂತಕುಮಾರ್ ಹೆಗಡೆ ಅವರು ಕಣದಲ್ಲಿದ್ದಾರೆ.