ಭ್ರಷ್ಟಾಚಾರದ ಬಗ್ಗೆ ಬಿಜೆಪಿ ದ್ವಂದ್ವ ನಿಲುವು: ರಾಹುಲ್
ಸಹರಾನ್‌ಪುರ್: ಭ್ರಷ್ಟಾಚಾರ ಆರೋಪದಡಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜೈಲಿಗೆ ಹೋಗಿ ಸಿಎಂ ಸ್ಥಾನವನ್ನೇ ಕಳೆದುಕೊಂಡಿದ್ದರು. ಬಿಜೆಪಿ ಭ್ರಷ್ಟಾಚಾರ ಕುರಿತಾಗಿ ದ್ವಂದ್ವ ಹೇಳಿಕೆಯನ್ನು ನೀಡುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಲೇವಡಿ ಮಾಡಿದರು.
ಉತ್ತರಪ್ರದೇಶದ ಸಹರಾನ್‌ಪುರ್‌ನ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್‌ರ ಅನುಪ ಸ್ಥಿತಿಯಲ್ಲೂ ಮಸೂದ್ ಪರ ಪ್ರಚಾರ ಮಾಡುತ್ತಿರುವ ರಾಹುಲ್ ಗಾಂಧಿ, ಬಿಜೆಪಿಯ ವಿರುದ್ಧ ಕಿಡಿಕಾರಿದರು. ಯುಪಿಎ ಸರ್ಕಾರದ ಭ್ರಷ್ಟಾಚಾರದ ಕುರಿತಾಗಿ ಮಾತನಾಡುವ ಬಿಜೆಪಿ ತನ್ನ ಪಕ್ಷದ ಸಿಎಂ ಒಬ್ಬರು ಭ್ರಷ್ಟಾಚಾರದ ಆರೋಪದಡಿ ಜೈಲಿಗೆ ಹೋಗಿ ಸಿಎಂ ಸ್ಥಾನವನ್ನೇ ಕಳೆದುಕೊಂಡಿದ್ದರು. ಬಿಜೆಪಿಗೆ ಇದು ಕಾಣಲಿಲ್ಲ ಎಂದು ವ್ಯಂಗ್ಯವಾಡಿದರು.
ಭ್ರಷ್ಟಾಚಾರದ ಬಗ್ಗೆ ಬಿಜೆಪಿ ದ್ವಂದ್ವ ನಿಲುವನ್ನು ಹೊಂದಿದ್ದು, ಕಾಂಗ್ರೆಸ್ ನಾಯಕರ ಭ್ರಷ್ಟಾಚಾರ ಮಾತ್ರ ಬಿಜೆಪಿ ಕಣ್ಣಿಗೆ ಕಾಣುತ್ತದೆ. ಬಿಜೆಪಿಯ ಯಾರು ಭ್ರಷ್ಟಾಚಾರದಲ್ಲಿ ತೊಡಿಗಿಕೊಂಡಿಲ್ಲ ಎಂಬ ಭಾವನೆ ಹೊಂದಿದೆ ಎಂದು ಕಿಡಿಕಾರಿದರು. ಅಲ್ಲದೆ ದೇಶದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಸರ್ಕಾರಿ ಕೆಲಸಗಳಲ್ಲಿ ಪಾರದರ್ಶಕತೆಯನ್ನು ತರುವ ಉದ್ದೇಶದಿಂದಾಗಿ ಯುಪಿಎ ಸರ್ಕಾರ ಆರ್‌ಟಿಐ ಕಾಯ್ದೆಯನ್ನು ಜಾರಿಗೆ ತಂದಿದೆ ಎಂದರು.
ಇದೇ ವೇಳೆ, ಹರಿಯಾಣದಲ್ಲಿ ಬಿಜೆಪಿ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ, ದೇಶದ ಬಡವರಿಗಾಗಿ ಕಾಂಗ್ರೆಸ್ ಸರ್ಕಾರ ಶ್ರಮಿಸುತ್ತಿಲ್ಲ ಎಂಬ ಆರೋಪ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ರಾಹುಲ್, ಬಡ ಜನತೆಗಾಗಿ ಕಾಂಗ್ರೆಸ್ ನಿರಂತರವಾಗಿ ಶ್ರಮಿಸುತ್ತಿದ್ದು, ಬಡ ಜನತೆಯ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಹರಾನ್‌ಪುರ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್‌ರನ್ನು ಇಂದು ಉತ್ತರ ಪ್ರದೇಶ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ಮಸೂದ್‌ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು.