ಅಶೋಕ್ ಚೌಹ್ವಾಣ್ ಗೆ ಟಿಕೆಟ್: ಕೈ ವಿರುದ್ಧ ನಮೋ ವಾಗ್ದಾಳಿ
ಅಶೋಕ್ ಚೌಹ್ವಾಣ್ ಅವರಿಗೆ ಕಾಂಗ್ರೆಸ್ ಪಕ್ಷ ಮತ್ತೆ ಟಿಕೆಟ್ ನೀಡುವ ಮೂಲಕ ತಾನು ಭ್ರಷ್ಟರ ಪರವಾಗಿ ಎಂಬುದನ್ನು ಸಾಬೀತು ಮಾಡಿದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.
ಮುಂಬೈ: ಆದರ್ಶ ಹಗರಣದಲ್ಲಿ ಭಾಗಿಯಾಗಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹ್ವಾಣ್ ಅವರಿಗೆ ಕಾಂಗ್ರೆಸ್ ಪಕ್ಷ ಮತ್ತೆ ಟಿಕೆಟ್ ನೀಡುವ ಮೂಲಕ ತಾನು ಭ್ರಷ್ಟರ ಪರವಾಗಿ ಎಂಬುದನ್ನು ಸಾಬೀತು ಮಾಡಿದೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಮಹಾರಾಷ್ಟ್ರದ ನಂದೇಡ್ ಗ್ರಾಮದಲ್ಲಿ ಚುನಾವಣಾ ಪ್ರಚಾರ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ ಅವರು, ಭ್ರಷ್ಟರನ್ನು ತಡೆಯಲು ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ನಿಯಂತ್ರಣವಿಲ್ಲ. ಭ್ರಷ್ಟರನ್ನು ತಡೆಯಲಾಗದ ಕಾಂಗ್ರೆಸ್ ಪಕ್ಷಕ್ಕೆ ಕೊಂಚವೂ ನಾಚಿಕೆಯೇ ಇಲ್ಲ ಎಂದು ಹೇಳಿದರು.
ಆದರ್ಶ ಹಗರಣದ ಕುರಿತು ತನಿಖೆ ಪ್ರಗತಿಯಲ್ಲಿದೆ ಎಂದು ರಾಹುಲ್ ಗಾಂಧಿ ಅವರು ಹೇಳುತ್ತಾರೆ. ಆದರೆ ಹಗರಣದಲ್ಲಿ ಭಾಗಿಯಾಗಿರುವ ಭ್ರಷ್ಟರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದ್ದೇಕೆ ಎಂದು ನರೇಂದ್ರ ಮೋದಿ ಪ್ರಶ್ನಿಸಿದ್ದಾರೆ.
ಕಳೆದ ಭಾನುವಾರ ಮುಂಬೈನಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಆದರ್ಶ ಹಗರಣದಲ್ಲಿ ಅಶೋಕ್ ಚೌಹ್ವಾಣ್ ಅವರ ಹೆಸರು ಕೇಳಿ ಬರುತ್ತಿರಬಹುದು. ಆದರೆ ಅವರ ವಿರುದ್ಧದ ಆರೋಪ ಸಾಬೀತಾಗಿಲ್ಲ. ಚುನಾವಣಾ ಆಯೋಗ ಅಥವಾ ನ್ಯಾಯಾಲಯ ಕೂಡ ಅವರನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಆದೇಶಿಸಿಲ್ಲ ಎಂದು ಹೇಳುವ ಮೂಲಕ ಅಶೋಕ್ ಚೌಹ್ವಾಣ್ ಅವರ ಬೆನ್ನಿಗೆ ನಿಂತಿದ್ದರು.
ಬಹಕೋಟಿ ಆದರ್ಶ ಹೌಸಿಂಗ್ ಬೋರ್ಡ್ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹ್ವಾಣ್ ಅವರ ಹೆಸರು ಬಲವಾಗಿ ಕೇಳಿಬರುತ್ತಿದ್ದು, ಕಳೆದ ವರ್ಷದ ಡಿಸೆಂಬರ್ನಲ್ಲಿ ಹಗರಣದ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ಸಮಿತಿಯನ್ನು ನೇಮಿಸಲಾಗಿತ್ತು. ಸಮಿತಿ ನೀಡಿದ್ದ ಮದ್ಯಂತರ ವರದಿಯಲ್ಲಿ ಮಹಾರಾಷ್ಟ್ರದ ಮೂವರು ಮಾಜಿ ಮುಖ್ಯಮಂತ್ರಿಗಳಾದ ಅಶೋಕ್ ಚೌಹ್ವಾಣ್, ವಿಲಾಸ್ ರಾವ್ ದೇಶ್ಮುಖ್ ಮತ್ತು ಸುಶೀಲ್ ಕುಮಾರ್ ಶಿಂಧೆ ಸೇರಿದಂತೆ ಹಲವು ರಾಜಕಾರಣಿಗಳು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿತ್ತು. 2010ರಲ್ಲಿ ಇದೇ ಹಗರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿದ್ದ ಅಶೋಕ್ ಚೌಹ್ವಾಣ್ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕಾಯಿತು.