ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೋದಿ ಸರ್ಕಾರದಲ್ಲಿ ಪಾಲ್ಗೊಳ್ಳುವುದಿಲ್ಲ: ರಾಜನಾಥ್ ಸಿಂಗ್

ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ತಾವು ಭಾಗಿಯಾಗುವುದಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ.

Srinivasa Murthy VN
Updated On : 2 May 2014, 5:05 am

ನವದೆಹಲಿ: ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ತಾವು ಭಾಗಿಯಾಗುವುದಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಪ್ರಚಾರಕ್ಕಾಗಿ ತೆರಳುತ್ತಿರುವ ರಾಜನಾಥ್ ಸಿಂಗ್ ಅವರು ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ್ದು, ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಬಹಮತ ಲಭಿಸಿ ನರೇಂದ್ರ ಮೋದಿ ಸರ್ಕಾರ ರಚನೆಯಾದರೆ ತಾವು ಸರ್ಕಾರದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಉತ್ತರ ಪ್ರದೇಶದ ಲಖನೌ ಕ್ಷೇತ್ರದಿಂದ ಸ್ಪರ್ಧಿಸಿರುವ ರಾಜನಾಥ್ ಸಿಂಗ್ ಅವರು, ಇತ್ತೀಚೆಗೆ ತಮ್ಮ ಕ್ಷೇತ್ರದ ಮುಸ್ಲಿಂ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಈ ವೇಳೆ ಶಿಯಾ ಮುಸ್ಲಿಂ ಪಂಗಡದ ಧರ್ಮ ಗುರುಗಳೊಬ್ಬರು ತಮಗೆ ನರೇಂದ್ರ ಮೋದಿ ಅವರ ಕುರಿತು ಭಯವಿದೆ. ಆದರೆ ರಾಜನಾಥ್ ಸಿಂಗ್ ಅವರು ವಾಜಪೇಯಿ ಅವರ ಉತ್ತರದಾಯಿಗಳಾಗಬಹುದು ಎಂದು ಹೇಳಿದ್ದರು. ಮುಸ್ಲಿಂ ಧರ್ಮ ಗುರುಗಳ ಅಭಿಪ್ರಾಯ ವ್ಯಕ್ತವಾಗುತ್ತಿದ್ದಂತೆಯೇ ನರೇಂದ್ರ ಮೋದಿ ಅವರಿಗೆ ರಾಜನಾಥ್ ಸಿಂಗ್ ಅವರು ಪರ್ಯಾಯವಾಗಬಹುದೆಂಬ ವಾದಗಳು ಚರ್ಚೆಯಾಗ ತೊಡಗಿವೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ಕೇಂದ್ರ ಮಾಜಿ ರೇಲ್ವೇ ಸಚಿವ ಲಾಲೂ ಪ್ರಸಾದ್ ಯಾದವ್ ಅವರು, ಮುಸ್ಲಿಂ ಧರ್ಮಗುರುಗಳನ್ನು ಮುಂದಿಟ್ಟುಕೊಂಡು ರಾಜನಾಥ್ ಸಿಂಗ್ ಅವರು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಿಕೊಳ್ಳುತ್ತಿದ್ದು, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಲ್ಲ ಎಂದು ವ್ಯಂಗ್ಯವಾಡಿದ್ದರು.

ಆದರೆ ಇದೀಗ ಆ ಎಲ್ಲ ವಾದ-ವಿವಾದಗಳಿಗೆ ತೆರೆ ಎಳೆದಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಅವರು, ಎನ್‌ಡಿಎ ಅಧಿಕಾರಕ್ಕೆ ಬಂದರೆ ನರೇಂದ್ರ ಮೋದಿ ಅವರೇ ಪ್ರಧಾನಿಯಾಗುತ್ತಾರೆ. ತಾವು ಸರ್ಕಾರದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ 2002 ಗುಜರಾತ್ ಕೋಮುಗಲಭೆ ಕಪ್ಪು ಚುಕ್ಕೆಯಾಗಿ ಮಾರ್ಪಟ್ಟಿದ್ದು, ಈ ಬಗ್ಗೆ ಬಿಜೆಪಿ ಮತ್ತು ಸ್ವತಃ ನರೇಂದ್ರ ಮೋದಿ ಅವರು ಹಲವು ಬಾರಿ ಸ್ಪಷ್ಟೀಕರಣ ನೀಡಿದ್ದರೂ, ಕೆಲ ಮುಸ್ಲಿಂ ಅಲ್ಪ ಸಂಖ್ಯಾತರಲ್ಲಿರುವ ಮೋದಿ ಭಯ ಇನ್ನೂ ದೂರವಾಗಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement