ರಾಹುಲ್ ಗೆಲುವಿಗಾಗಿ ಕಾಂಗ್ರೆಸ್ನಿಂದ ಮತ ಭಿಕ್ಷೆ: ಮೋದಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಶತಾಯ...
ಕೃಷ್ಣಾನಗರ(ಪಶ್ಚಿಮ ಬಂಗಾಳ): ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಶತಾಯ ಗತಾಯ ಗೆಲ್ಲಿಸಲೆಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್ ಅಮೇಥಿಯಲ್ಲಿ ಮತಗಳಿಗಾಗಿ ಕಾಂಗ್ರೆಸ್ ಭಿಕ್ಷೆ ಬೇಡುತ್ತಿದೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಬುಧವಾರ ಲೇವಡಿ ಮಾಡಿದರು.
ಪಶ್ಚಿಮ ಬಂಗಾಳದ ಕೃಷ್ಣಾನಗರದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಾರಂಭದಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ನೇರ ವಾಗ್ದಾಳಿ ನಡೆಸಿದರು. ಭವಿಷ್ಯದ ಪ್ರಧಾನಿ ರಾಹುಲ್ ಗಾಂಧಿಯನ್ನು ಗೆಲ್ಲಿಸಲು ಕಾಂಗ್ರೆಸ್ ಶತ ಪ್ರಯತ್ನ ಮಾಡುತ್ತಿದ್ದು, ಇದಕ್ಕಾಗಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ರಾಹುಲ್ ಗಾಂಧಿಗಾಗಿ ಮತ ಭಿಕ್ಷೆ ಕೇಳುತ್ತಿದೆ ಎಂದು ಆರೋಪಿಸಿದರು.
ಅಮೇಥಿ ಲೋಕಸಭಾ ಕ್ಷೇತ್ರದಿಂದ ಗೆಲ್ಲುವ ಅತಿಯಾದ ಆತ್ಮವಿಶ್ವಾಸವನ್ನು ತಾಯಿ, ಮಗ ಹೊಂದಿದ್ದಾರೆ. ಆದರೆ ಚುನಾವಣೆಯಲ್ಲಿ ಜನತೆ ತಾಯಿ ಮಗನ ಅತಿಯಾದ ಆತ್ಮವಿಶ್ವಾಸಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಇದೇ ವೇಳೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಮಮತಾ ಅವರ ಆಡಳಿತಾವಧಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿದರು.