ವಿವಾದಾತ್ಮಕ ಹೇಳಿಕೆ: ಕೇಜ್ರಿಗೆ ಆಯೋಗದ ನೋಟಿಸ್
ವಿವಾದಾತ್ಮಕ ಹೇಳಿಕೆ ನೀಡಿದ್ದ ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಗೆ ಕೇಂದ್ರ..
ನವದೆಹಲಿ: ಅಮೇಥಿಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಅವರಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.
ಈ ಹಿಂದೆ ಅಮೇಥಿಯಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅರವಿಂದ್ ಕೇಜ್ರಿವಾಲ್ ಅವರು, ಕಾಂಗ್ರೆಸ್ ಮತ್ತು ಬಿಜೆಪಿಗೆ ನೀವು ಕೇವಲ ಒಂದೇ ಒಂದು ಮತ ನೀಡಿದರೂ ಅದು ನೀವು ಖುದಾ (ದೇವರು)ಗೆ ಮತ್ತು ದೇಶಕ್ಕೆ ಮಾಡಿದ ದ್ರೋಹವಾಗುತ್ತದೆ ಎಂದು ಹೇಳಿದ್ದರು. ಇದೇ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್ ನೀಡಿದ್ದು, ಮೇ 13ರರೊಳಗೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದೆ.
ಇದೇ ಮೇ2ರಂದು ಅಮೇಥಿ ಕ್ಷೇತ್ರದ ಆಮ್ ಆದ್ಮಿ ಪಕ್ಷ ಅಭ್ಯರ್ಥಿ ಕುಮಾರ್ ವಿಶ್ವಾಸ್ ಪರ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ್ದ ಅರವಿಂದ್ ಕೇಜ್ರಿವಾಲ್ ಅವರು, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ, ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.
ಅಮೇಥಿ, ವಾರಣಾಸಿ ಸೇರಿದಂತೆ ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಕೆಲ ಕ್ಷೇತ್ರಗಳಲ್ಲಿ ನಾಳೆ ಮತದಾನ ನಡೆಯಲಿದ್ದು, ಮೇ 16ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.