ಕರ್ನಾಟಕದಲ್ಲೂ ಕೈ ಗೆ ಮುಖಭಂಗ, ಅರಳಿದ ಕಮಲ
ದೇಶದಲ್ಲಿ ಮೋದಿ ಅಲೆ ಇಲ್ಲ ಎಂದು ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ..
ಬೆಂಗಳೂರು: ದೇಶದಲ್ಲಿ ಮೋದಿ ಅಲೆ ಇಲ್ಲ ಎಂದು ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕರ್ನಾಟಕದಲ್ಲಿ ಮುಖಭಂಗವಾಗಿದ್ದು, ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಮೈಸೂರು ಕ್ಷೇತ್ರ ಕೈ ತಪ್ಪಿದೆ.
ಒಟ್ಟು 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಕೇವಲ 9 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ಬಿಜೆಪಿ 16ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವಿನ ನಾಗಾಲೋಟ ಬೀರಿದೆ. ಕರ್ನಾಟಕದ ಕಾಂಗ್ರೆಸ್ ಭದ್ರಕೊಟೆಗಳು ಎಂದು ಬಿಂಬಿಸಲಾಗುತ್ತಿದ್ದ ಪ್ರಮುಖ ಕ್ಷೇತ್ರಗಳಲ್ಲಿಯೇ ಕೈಗೆ ಮುಖಭಂಗವಾಗಿದೆ. ಕಾಂಗ್ರೆಸ್ ಪಾಲಿನ ಪ್ರತಿಷ್ಟಿತ ಕ್ಷೇತ್ರಗಳೆಂದು ಭಾವಿಸಲಾಗಿದ್ದ ಮೈಸೂರು, ಬೀದರ್, ಮಂಡ್ಯ, ಬೆಂಗಳೂರು ದಕ್ಷಿಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ತೀವ್ರ ಹಿನ್ನಡೆಯನ್ನನುಭವಿಸಿದೆ.
ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರು ಸೋಲನ್ನು ಅನುಭವಿಸಿದ್ದು, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮಾಜಿ ಕೇಂದ್ರ ಸಚಿವ ವೀರಪ್ಪಮೊಯ್ಲಿ ಅವರು ಗೆಲುವು ದಾಖಲಿಸಿದ್ದಾರೆ. ಇನ್ನು ಮುಖ್ಯಮಂತ್ರಿಗಳ ಸ್ವಕ್ಷೇತ್ರ ಮತ್ತು ಸತತ 3ನೇ ಬಾರಿಗೆ ಸಂಸದ ಸ್ಥಾನಕ್ಕೆ ಪ್ರತಿನಿಧಿಸಿದ್ದ ಕಾಂಗ್ರೆಸ್ ಹಿರಿಯ ನಾಯಕ ಎಚ್.ವಿಶ್ವನಾಥ್ ಅವರ ಕ್ಷೇತ್ರ ಮೈಸೂರು ಲೋಕಸಭಾ ಕ್ಷೇತ್ರ ಬಿಜೆಪಿ ಪಾಲಾಗಿದೆ. ಅದರಲ್ಲಿಯೂ ಇದೇ ಮೊದಲಬಾರಿಗೆ ರಾಜಕೀಯಕ್ಕೆ ಧುಮುಕಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದ ಪತ್ರಕರ್ತ ಪ್ರತಾಪ್ ಸಿಂಹ ಅವರು ವಿಶ್ವನಾಥ್ ಅವರನ್ನು ಸೋಲಿಸಿರುವುದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಇನ್ನು ಶಿವಮೊಗ್ಗ ಕ್ಷೇತ್ರದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ತಿರಸ್ಕರಿಸಿದ್ದ ಮಂಜುನಾಥ್ ಭಂಡಾರಿ ಅವರಿಗೆ ಟಿಕೆಟ್ ನೀಡಿದ್ದ ಕಾಂಗ್ರೆಸ್ ಇದೀಗ ಕೈ ಕೈ ಹಿಸುಕಿಕೊಳ್ಳುವಂತಾಗಿದೆ. ಇದೇ ಪರಿಸ್ಥಿತಿ ಜೆಡಿಎಸ್ ಪಕ್ಷದಲ್ಲಿಯೂ ಇದ್ದು, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ವರ್ಚಸ್ಸು ಬಳಸಿಕೊಂಡು ಗೆಲುವು ಪಡೆಯಲು ಯತ್ನಿಸಿದ್ದ ಜೆಡಿಎಸ್ ಪಕ್ಷ ಶಿವಮೊಗ್ಗ ಕ್ಷೇತ್ರದಿಂದ ಬಂಗಾರಪ್ಪ ಅವರ ಪುತ್ರಿ ಮತ್ತು ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾಶಿವರಾಜ್ ಕುಮಾರ್ ಅವರನ್ನು ಕಣಕ್ಕಿಳಿಸಿತ್ತು. ಆದರೆ ಗೀತಾ ಶಿವರಾಜ್ ಕುಮಾರ್ ಅವರು 3ನೇ ಸ್ಥಾನಕ್ಕೆ ತಳ್ಳಲ್ಪಡುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದಾರೆ.
ಅಂತೆಯೇ ಆಧಾರ್ ಖ್ಯಾತಿಯ ನಂದನ್ ನಿಲೇಕಣಿ ಅವರ ಸ್ಪರ್ಧೆಯೊಂದಿಗೆ ಕಳೆಕಟ್ಟಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಬಿಜೆಪಿ ಪಾಲಾಗಿದ್ದು, ಅನಂತ್ ಕುಮಾರ್ ಅವರು ತಮ್ಮ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಮೂರು ಕ್ಷೇತ್ರಗಳು ಬಿಜೆಪಿ ಪಾಲಾಗಿದ್ದು, ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಅವರು, ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಪಿ.ಸಿ.ಮೋಹನ್ ಅವರು ಗೆಲುವು ಸಾಧಿಸುವುದರೊಂದಿಗೆ ರಾಜ್ಯ ರಾಜಧಾನಿ ಬಿಜೆಪಿ ಪಾಲಾಗಿದೆ.
ಒಟ್ಟಾರೆ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮೋದಿ ಫ್ಯಾಕ್ಟರ್ ಬಿಜೆಪಿಗೆ ವರದಾನವಾಗಿ ಪರಿಣಮಿಸಿದ್ದು, ಕರ್ನಾಟಕದಲ್ಲಿಯೂ ಇದು ಪ್ರತಿಫಲಿಸಿದೆ.