ಮೇ 20ಕ್ಕೆ ಬಿಜೆಪಿ ಸಂಸದೀಯ ಪಕ್ಷದ ಸಭೆ
ಇದೇ ಮೇ 20ರಂದು ಬಿಜೆಪಿ ಪಕ್ಷದ ಸಂಸದೀಯ ಪಕ್ಷದ ಸಭೆ ನಡೆಯಲಿದ್ದು, ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕ ನಿಗದಿ ಕುರಿತು..
ನವದೆಹಲಿ: ಇದೇ ಮೇ 20ರಂದು ಬಿಜೆಪಿ ಪಕ್ಷದ ಸಂಸದೀಯ ಪಕ್ಷದ ಸಭೆ ನಡೆಯಲಿದ್ದು, ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕ ನಿಗದಿ ಕುರಿತು ಚರ್ಚೆ ನಡೆಸಲಾಗುತ್ತದೆ.
ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇದೇ ಮೇ 20 ಮಂಗಳವಾರ ಬಿಜೆಪಿ ಪಕ್ಷದ ಸಂಸದೀಯ ಸಭೆಯನ್ನು ನಿಗದಿ ಪಡಿಸಲಾಗಿದೆ. ಸಭೆಯಲ್ಲಿ ಬಿಜೆಪಿ ಸಂಸದೀಯ ಪಕ್ಷದ ನಾಯಕರನ್ನಾಗಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಲಾಗುತ್ತದೆ. ಅಲ್ಲದೆ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ದಿನಾಂಕವನ್ನು ಕೂಡ ಅಂದೇ ತೀರ್ಮಾನಿಸುವ ಸಾಧ್ಯತೆ ಇದೆ.
ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಭಾಗವಹಿಸುವಂತೆ ಎನ್ಡಿಎ ಮೈತ್ರಿಕೂಟದ ಮಿತ್ರಪಕ್ಷಗಳ ನಾಯಕರಿಗೂ ಬಿಜೆಪಿ ನಾಯಕರು ಆಹ್ವಾನ ನೀಡಿದ್ದಾರೆ.
ನಿನ್ನೆ ನಡೆದ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ದಾಖಲೆಯ ಸಾಧನೆ ಮಾಡಿದ್ದು, ಸತತ 3 ದಶಕಗಳ ಬಳಿಕ ಪಕ್ಷವೊಂದು ಕೇಂದ್ರದಲ್ಲಿ ಇದೇ ಪ್ರಥಮ ಬಾರಿಗೆ ಸ್ಪಷ್ಟಬಹುಮತ ಪಡೆದಿದೆ. ಈ ಹಿಂದೆ 1984ರಲ್ಲಿ ಅಂದಿನ ಪ್ರಧಾನಿಯಾಗಿದ್ದ ದಿ.ಇಂದಿರಾಗಾಂಧಿ ಅವರ ಹತ್ಯೆಯ ನಂತರ ಅನುಕಂಪದ ಅಲೆಯಲ್ಲಿ ತೇಲುತ್ತಿದ್ದ ಕಾಂಗ್ರೆಸ್ ಪಕ್ಷ ಅಂದು 414 ಸ್ಥಾನಗಳಲ್ಲಿ ಜಯಭೇರಿ ಭಾರಿಸಿತ್ತು. ಇದಾದ ಬಳಿಕ ಯಾವುದೇ ರಾಜಕೀಯ ಪಕ್ಷಕ್ಕೂ ಸ್ಪಷ್ಟ ಬಹುಮತ ಲಭಿಸಿರಲಿಲ್ಲ. ಮೈತ್ರಿಕೂಟಗಳು ಸರ್ಕಾರ ನಡೆಸಿದ್ದವು.