ಭಾಷಾ ಮಾಧ್ಯಮ: ಸುಪ್ರೀಂ ತೀರ್ಪಿನ ವಿರುದ್ಧ ಮೇಲ್ಮನವಿ
ಬೆಂಗಳೂರು: ಭಾಷಾ ಮಾಧ್ಯಮ ಕಡ್ಡಾಯ ಬೇಡ ಎಂಬ ಸುಪ್ರೀಂಕೋರ್ಟ್‌ನ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಮಂಗಳವಾರ ತೀರ್ಮಾನಿಸಿದೆ.
ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಪ್ರೀಂ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.
ತಜ್ಞನ ಜತೆ ಸಮಾಲೋಚನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಜೂನ್ 5ರೊಳಗೆ ಮರುಪರಿಶೀಲನ ಅರ್ಜಿ ಸಲ್ಲಿಸಲಾಗುವುದು ಎಂದರು. ಅಲ್ಲದೆ ಭಾಷಾ ಮಾಧ್ಯಮ ವಿಚಾರವಾಗಿ ಸಂವಿಧಾನ ತಿದ್ದುಪಡಿ ಕುರಿತಾಗಿ ಇತರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆಗೆ ಚರ್ಚೆ ನಡೆಸಲು ನಿರ್ಧಾರಿಸಲಾಗಿದ್ದು, ಭಾಷಾ ಮಾಧ್ಯಮದ ಬಗ್ಗೆ ಸುಪ್ರೀಂ ತೀರ್ಪಿನ ವಿರುದ್ಧ ಮೇಲ್ಮನವಿ ಅರ್ಜಿ ಸಲ್ಲಿಸುವಂತೆ ಎಲ್ಲಾ ರಾಜ್ಯಗಳ ಸಿಎಂಗಳಿಗೆ ಪತ್ರ ಬರೆದು ಮನವಿ ಮಾಡಲಾಗುವುದು ಎಂದರು.
ಇಂದು ನಡೆದ ಸಭೆಯಲ್ಲಿ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ, ಅಡ್ವೋಕೇಟ್ ಜನರಲ್ ಪ್ರೋ. ರವಿವರ್ಮ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ, ಸಚಿವರಾದ ಕಿಮ್ಮಾನೆ ರತ್ನಾಕರ ಹಾಗೂ ಉಮಾಶ್ರೀ ಉಪಸ್ಥಿತರಿದ್ದರು.
ರಾಜ್ಯ ಸರ್ಕಾರವು ಪ್ರಾಥಮಿಕ ಶಾಲೆಗಳಲ್ಲಿ ಮಾತೃಭಾಷೆ ಇಲ್ಲವೇ ಪ್ರಾದೇಶಿಕ ಭಾಷೆಯನ್ನು ಏಕೈಕ ಶಿಕ್ಷಣ ಮಾಧ್ಯಮವನ್ನಾಗಿ ಹೇರಲು ಬರುವುದಿಲ್ಲ ಎಂದು ಮೇ 6ರಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಇದರೊಂದಿಗೆ ಮಾತೃಭಾಷಾ ಶಿಕ್ಷಣ ಮಾಧ್ಯಮವನ್ನು ಕಡ್ಡಾಯ ಮಾಡಿದ್ದ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನೆಡೆಯಾಗಿತ್ತು.