ಬಿಸಿಸಿಐನ ಅಧ್ಯಕ್ಷರಾಗಿ ಶ್ರೀನಿವಾಸನ್ ಮುಂದುವರಿಕೆಗೆ ಸುಪ್ರೀಂ ನಕಾರ
ಬಿಸಿಸಿಐ ಅಧ್ಯಕ್ಷರಾಗಿ ಮುಂದುವರೆಯಲು ಅವಕಾಶ ನೀಡುವಂತೆ ಕೋರಿ ಶ್ರೀನಿವಾಸನ್..
ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಅಧ್ಯಕ್ಷರಾಗಿ ಮುಂದುವರೆಯಲು ಅವಕಾಶ ನೀಡುವಂತೆ ಕೋರಿ ಬಿಸಿಸಿಐನ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ.
ಭಾರತೀಯ ಪ್ರಿಮಿಯರ್ ಲೀಗ್‌ನ 6ನೇ ಆವೃತ್ತಿಯ ಕಳ್ಳಾಟ ಪ್ರಕರಣಕ್ಕೆ ಸಂಬಂಧಿಸದಂತೆ ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಶ್ರೀನಿವಾಸನ್‌ರನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ತಾವು ಬಿಸಿಸಿಐನ ಅಧ್ಯಕ್ಷರಾಗಿ ಮುಂದುವರೆಯಲು ಹಾಗೂ ಸ್ಪಾಟ್ ಫಿಕ್ಸಿಂಗ್‌ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 28 ಮತ್ತು ಮೇ 16ರ ಮಧ್ಯಂತರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಬುಧವಾರ ಶ್ರೀನಿವಾಸನ್ ಅರ್ಜಿ ಸಲ್ಲಿಸಿದ್ದರು.
ಇಂದು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ತೀರ್ಪಿಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದ್ದು, ಪ್ರಕರಣ ಸಂಬಂಧ ಈಗಾಗಲೇ ತೀರ್ಪು ನೀಡಲಾಗಿದೆ. ಹೀಗಾಗಿ ಪ್ರಕರಣದಲ್ಲಿ ಮಧ್ಯೆ ಪ್ರವೇಶಿಸುವುದಿಲ್ಲ ಎಂದು ಕೋರ್ಟ್ ಹೇಳಿದೆ. ಅಲ್ಲದೆ ಈ ಸಂಬಂಧ ಪದೇ ಪದೇ ಅರ್ಜಿ ಸಲ್ಲಿಸಿ ಕೋರ್ಟ್‌ಗೆ ಮುಜುಗರ ತರಬೇಡಿ ಎಂದು ಕೋರ್ಟ್ ಕಾರವಾಗಿ ನುಡಿದಿದೆ.
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಅಧ್ಯಕ್ಷ ಶ್ರೀನಿವಾಸನ್‌ರನ್ನು ರಾಜಿನಾಮೆ ನೀಡಬೇಕು. ಆ ಸ್ಥಾನಕ್ಕೆ ಬಿಸಿಸಿಐನ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಸುಪ್ರೀಂಕೋರ್ಟ್ ಮಾರ್ಚ್ 28ರಂದು ತೀರ್ಪು ನೀಡಿತ್ತು.
ಐಪಿಎಲ್ 6ನೇ ಆವೃತ್ತಿಯ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಚೆನ್ನೈ ಸೂಪರ್ ಕಿಂಗ್‌ನ ಮಾಲೀಕರಾದ ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅಳಿಯ ಮೇಯಪ್ಪನ್ ಅವರು ಭಾಗಿಯಾಗಿದ್ದು, ಈ ಸಂಬಂಧ ಶ್ರೀನಿವಾಸನ್ ತಮ್ಮ ಅಧ್ಯಕ್ಷ ಸ್ಥಾನವನ್ನು ಕಳೆದುಕೊಂಡಿದ್ದರು.