ಕೇಜ್ರಿವಾಲ್ ನ್ಯಾಯಾಂಗ ಬಂಧನ ಜೂನ್ 6ರವರೆಗೆ ವಿಸ್ತರಣೆ
ನವದೆಹಲಿ: ಜಾಮೀನು ನಿರಾಕರಿಸಿ ಜೈಲಿಗೆ ಹೋಗಿರುವ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜೂನ್ 6ರವರೆಗೆ ವಿಸ್ತರಿಸಲಾಗಿದೆ.
ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ, ಇಂದು ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಪಟಿಯಾಲ ಹೌಸ್ ಕೋರ್ಟ್, ಕೇಜ್ರಿವಾಲ್ ಬಂಧನದ ಅವಧಿಯನ್ನು ಜೂನ್ 6ರವರೆಗೆ ವಿಸ್ತರಿಸಿ ಆದೇಶಿಸಿದೆ.
ಬಿಜೆಪಿ ಮಾಜಿ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಸಲ್ಲಿಸಿದ್ದ ಮಾನನಷ್ಟ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ಜಾಮೀನು ಪಡೆಯಲು ನಿರಾಕರಿಸಿದ್ದರು. ಹೀಗಾಗಿ ಅವರನ್ನು ಕೋರ್ಟ್ ಎರಡು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು.
ಚುನಾವಣೆಗೂ ಮುನ್ನ ಭ್ರಷ್ಟ್ರರ ಪಟ್ಟಿ ಬಿಡುಗಡೆ ಮಾಡಿದ್ದ ಅರವಿಂದ್ ಕೇಜ್ರಿವಾಲ್ ನಿತಿನ್ ಗಡ್ಕರಿ ಅವರ ಹೆಸರನ್ನು ಸೇರಿಸಿದ್ದರು. ನಿತಿನ್ ಗಡ್ಕರಿ ದೆಹಲಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ವಿಚಾರಣೆ ನಡೆಸಿದ ನ್ಯಾಯಾದೀಶರಾದ ಗೋಮತಿ ಮನೋಚ, 10 ಸಾವಿರ ವೈಯಕ್ತಿಕ ಬಾಂಡ್ ನೀಡಿ ಜಾಮೀನು ಪಡೆಯುವಂತೆ ಕೇಜ್ರಿವಾಲ್‌ಗೆ ಸೂಚಿಸಿದರು. ಆದರೆ, ಅವರು ಅದಕ್ಕೆ ಒಪ್ಪಲಿಲ್ಲ. ನಾನೇಕೆ ಜಾಮೀನು ಪಡೆಯಲಿ ಎಂದು ಪ್ರಶ್ನಿಸಿದರು. ಅನಿವಾರ್ಯವಾಗಿ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದರು.