ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಬಂಧನ

ಕಳೆದ ಸೋಮವಾರ ಬಿಜೆಪಿ ವಿಜಯೋತ್ಸವದ ವೇಳೆ ಬಿಜಾಪುರದಲ್ಲಿ ನಡೆದ ಎರಡು ಗುಂಪುಗಳ ನಡುವಿನ ಘರ್ಷಣೆಗೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ...

Lingaraj Badiger
Updated On : 28 May 2014, 11:07 am

ಕೊಲ್ಲಾಪುರ: ಕಳೆದ ಸೋಮವಾರ ಬಿಜೆಪಿ ವಿಜಯೋತ್ಸವದ ವೇಳೆ ಬಿಜಾಪುರದಲ್ಲಿ ನಡೆದ ಎರಡು ಗುಂಪುಗಳ ನಡುವಿನ ಘರ್ಷಣೆಗೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.

ಘರ್ಷಣೆಗೆ ಯತ್ನಾಳ್ ಪ್ರಚೋದನೆ ಪ್ರಮುಖ ಕಾರಣ ಎಂದು ಆರೋಪಿಸಿ ಅವರ ವಿರುದ್ಧ ಒಟ್ಟು ನಾಲ್ಕು ಕೇಸ್ ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಯತ್ನಾಳ್ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು ಇಂದು ಅವರನ್ನು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಘಟನೆಯ ಕುರಿತು ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಬೆಳಗಾವಿ ಉತ್ತರ ವಲಯ ಐಜಿಪಿ ಬಾಸ್ಕರ್ ರಾವ್ ಅವರು, ಘಟನೆಯ ವಿಡಿಯೋ ದೃಶ್ಯಗಳನ್ನು ಪರಿಶೀಲಿಸಲಾಗಿದೆ. ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಸುಮಾರು 100 ಜನರು ಗಲಭೆಯಲ್ಲಿ ಪಾಲ್ಗೊಂಡಿರುವುದನ್ನು ಖಚಿತಪಡಿಸಿಕೊಳ್ಳಲಾಗಿದೆ.  ಘಟನೆ ಸಂಬಂಧ ಈಗಾಗಲೇ 26 ಜನರನ್ನು ಬಂಧಿಸಲಾಗಿದೆ. ಘಟನೆ ಬಳಿಕ ಯತ್ನಾಳ ಪರಾರಿಯಾಗಿದ್ದಾರೆ. ಅವರನ್ನು ಬಂಧಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಅವರನ್ನು ಬಂಧಿಸುವುದಾಗಿ ತಿಳಿಸಿದ್ದರು.

ಘಟನೆ ಕುರಿತಂತೆ ಧಾರವಾಡ ಎಸ್ಪಿ ಲೋಕೇಶಕುಮಾರ ಅವರಿಂದ ತನಿಖೆ ನಡೆಸಲಾಗುತ್ತಿದೆ. ಮೂರು ದಿನಗಳ ಕಾಲ ಬಿಜಾಪುರದಲ್ಲಿ ನಿಷೇಧಾಜ್ಞೆ ಮುಂದುವರಿಯಲಿದೆ ಎಂದು ಹೇಳಿದ್ದರು.

ಯತ್ನಾಳ ಮೇಲೆ ನಾಲ್ಕು ಪ್ರಕರಣ: ಗಲಭೆ, ಪ್ರಚೋದನೆಯಲ್ಲಿ ಯತ್ನಾಳ ಪಾತ್ರ ನಿಚ್ಚಳವಾಗಿದೆ. ಇದಕ್ಕೂ ಮುನ್ನ ಅವರು ಮಾಡಿದ ಪ್ರಚೋದನಾಕಾರಿ ಭಾಷಣ, ನಿನ್ನೆಯ ಘಟನೆಯ ವಿಡಿಯೋ ಚಿತ್ರೀಕರಣ ಪರಿಶೀಲಿಸಲಾಗಿದೆ. ಅವರ ವಿರುದ್ಧ ನಾಲ್ಕು ಪ್ರಕರಣ ದಾಖಲಾಗಿದ್ದು, ಎಲ್ಲವೂ ಜಾಮೀನುರಹಿತ. ಘಟನೆಯ ಬಳಿಕ ಅವರು ಪರಾರಿಯಾಗಿದ್ದಾರೆ. ಬಂಧನಕ್ಕೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಭಾಸ್ಕರ್ ರಾವ್ ತಿಳಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement