ಮೋದಿ-ಶರೀಫ್ ಮಾತುಕತೆ ನಿರೀಕ್ಷೆಗಿಂತಲೂ ಚೆನ್ನಾಗಿತ್ತು: ಸರ್ತಾಜ್ ಅಜೀಜ್
ಭಾರತದ ನೂತನ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನದ ಪ್ರಧಾನಿ ನವಾಜ್ ಶರೀಫ್ ಅವರ ನಡುವಿನ ...
ಇಸ್ಲಾಮಾಬಾದ್: ಭಾರತದ ನೂತನ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನದ ಪ್ರಧಾನಿ ನವಾಜ್ ಶರೀಫ್ ಅವರ ನಡುವಿನ ದ್ವಿಪಕ್ಷೀಯ ಮಾತುಕತೆ ನಿರೀಕ್ಷೆಗಿಂತಲೂ ಚೆನ್ನಾಗಿತ್ತು ಎಂದು ಪಾಕ್ ಪ್ರಧಾನಿಯ ವಿದೇಶಾಂಗ ವ್ಯವಹಾರ ಮತ್ತು ರಕ್ಷಣಾ ಸಲಹೆಗಾರ ಸರ್ತಾಜ್ ಅಜೀಜ್ ಅಭಿಪ್ರಾಯಪಟ್ಟಿದ್ದಾರೆ.
ಮಂಗಳವಾರ ಮೋದಿ ಮತ್ತು ಶರೀಫ್ ನಡುವೆ ದ್ವಿಪಕ್ಷೀಯ ಮಾತುಕತೆ ನಡೆದಿದ್ದು, ಈ ಬಗ್ಗೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಜೀಜ್, ಉಭಯ ರಾಷ್ಟ್ರಗಳ ಪ್ರಧಾನಿಗಳು ಕಾಶ್ಮೀರ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂದಿದ್ದಾರೆ.
ಕಾಶ್ಮೀರದ ಬಗ್ಗೆ ಚರ್ಚೆ ನಡೆಸುವಾಗ ಹುರಿಯತ್ ನಾಯಕರ ಅಭಿಪ್ರಾಯಗಳನ್ನೂ ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಶರೀಫ್ ಅವರು ಮೋದಿಯವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾರತಕ್ಕೆ ಭೇಟಿ ನೀಡಿದ್ದರಿಂದ ಹುರಿಯತ್ ನಾಯಕರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ ಎಂದು ಅಜೀಜ್ ಹೇಳಿದ್ದಾರೆ.
ಅದೇ ವೇಳೆ ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಮಾತುಕತೆಯ ಬಗ್ಗೆ ಮಾತನಾಡಿದ ಅಜೀಜ್ ಉಭಯ ರಾಷ್ಟ್ರಗಳು ಭಯೋತ್ಪಾದನೆಯ ವಿರುದ್ಧ ಹೋರಾಡಲು ಪ್ರತಿಜ್ಞಾಬದ್ಧವಾಗಿವೆ ಎಂದಿದ್ದಾರೆ.