ಉ.ಪ್ರದೇಶ: ಇಬ್ಬರು ಸಹೋದರಿಯರ ಮೇಲೆ ಹತ್ಯಾಚಾರ
ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ಸಹೋದರಿ...
ನವದೆಹಲಿ: ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ಸಹೋದರಿಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಬಡೂನ್ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.
'ಬಾಲಕಿಯರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಸಂಬಂಧ ನಾವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದೇವೆ ಮತ್ತು ಪ್ರಕರಣದ ತನಿಖೆಗೆ ಒಂದು ಸಮಿತಿ ರಚಿಸಲಾಗುವುದು' ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಮಮತಾ ಶರ್ಮಾ ಅವರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರು ಯಾವ ಕ್ರಮ ತೆಗೆದುಕೊಂಡಿದ್ದಾರೆ ಎಂಬುದರ ವರದಿಗಾಗಿ ನಾವು ಕಾಯುತ್ತಿದ್ದೇವೆ. ವರದಿ ಬಂದ ನಂತರ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ನಿರ್ಧರಿಸಲಾಗುವುದು ಮತ್ತು ಪ್ರಕರಣ ಸಂಬಂಧ ಈವರೆಗೂ ಯಾರನ್ನೂ ಬಂಧಿಸಿದ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಶರ್ಮಾ ಹೇಳಿದ್ದಾರೆ.
14 ಮತ್ತು 15 ವರ್ಷದ ಇಬ್ಬರು ಸಹೋದರಿಯರು ಕಳೆದ ಮಂಗಳವಾರ ರಾತ್ರಿ ಮನೆಯಿಂದ ನಾಪತ್ತೆಯಾಗಿದ್ದರು. ಬುಧವಾರ ಉಷೇತ್ ಗ್ರಾಮದಲ್ಲಿನ ಮಾವಿನ ಮರವೊಂದಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ಬಾಲಕಿಯರ ಮೃತದೇಹಗಳು ಪತ್ತೆಯಾಗಿದ್ದು, ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಬಂಧ ಇಬ್ಬರು ಪೊಲೀಸ್ ಪೇದೆ ಸೇರಿದಂತೆ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಮತ್ತು ಆರೋಪಿ ಪೇದೆಗಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.