ಕರ್ನಾಟಕ ಕಾಂಗ್ರೆಸ್‌ನಲ್ಲಿ ಕಳೆದ ಮೂರು ವರ್ಷಗಳಿಂದ ದಿನನಿತ್ಯ ಕೇಳಿಬರುತ್ತಿದ್ದ ಸಿಎಂ ಹುದ್ದೆ ಬದಲಾವಣೆ, ನಾಯಕತ್ವ ಹಸ್ತಾಂತರ ಪ್ರಹಸನಕ್ಕೆ ತೆರೆ ಬೀಳುವ ಸಮಯ ಬಂದಿದೆ.
ಈ ಮೊದಲು ಮಾಡಿಕೊಳ್ಳಲಾಗಿದ್ದ ಆಂತರಿಕ ‘ಅಧಿಕಾರ ಹಂಚಿಕೆ ಸೂತ್ರ’ದ ಪ್ರಕಾರವೇ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇದರೊಂದಿಗೆ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಹೊಸ ನಾಯಕತ್ವದ ಅಧ್ಯಾಯ ಆರಂಭವಾಗುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ.
"ಅವರು ನಾಳೆ ರಾಜ್ಯಪಾಲರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ" ಎಂದು ಮುಖ್ಯಮಂತ್ರಿಯ ಆಪ್ತ ಮೂಲಗಳು ಪಿಟಿಐಗೆ ತಿಳಿಸಿವೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ಗೆಹ್ಲೋಟ್ ಅವರಿಗೆ ರಾಜೀನಾಮೆ ನೀಡಬಹುದು.
ಗುರುವಾರ ಬೆಳಗ್ಗೆ 9ಕ್ಕೆ ಸಿದ್ದರಾಮಯ್ಯ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಕರೆದಿದ್ದು ಅದರಲ್ಲಿ ಡಿ ಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ಅದಾದ ನಂತರ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಬದಲಾವಣೆ ಹಾಗೂ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧ ಬುಧವಾರ ಸಂಜೆ ಬೆಂಗಳೂರಿಗೆ ಆಗಮಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಮಾಧ್ಯಮಗಳು ಈ ವಿಷಯದ ಬಗ್ಗೆ ಊಹಾಪೋಹಗಳನ್ನು ವರದಿ ಮಾಡಬಾರದು ಎಂದರು.
ನಿನ್ನೆ ದೆಹಲಿಯಲ್ಲಿ ಸಭೆ ನಡೆಸಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ವೇಣುಗೋಪಾಲ್ ಭಾಗಿಯಾಗಿದ್ದರು. ರಾಜ್ಯಸಭಾ ಮತ್ತು ವಿಧಾನ ಪರಿಷತ್ ಬಗ್ಗೆ ಸಭೆ ಮಾಡಿದ್ವಿ. ಪವರ್ ಶೇರಿಂಗ್ ಆ ರೀತಿಯದ್ದು ಏನು ಇಲ್ಲ. ರಾಜ್ಯ ಸಭೆಯದ್ದು ಮಾತ್ರ ಚರ್ಚೆ ಆಗಿದೆ. ಸಿಎಂ ಬದಲಾವಣೆ ಬಗ್ಗೆ ಮುಂದೆ ಹೇಳುತ್ತೇವೆ. ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿ, ಎರಡು ಬಾರಿ ಸಿಎಂ ಆಗಿ ಕೆಲಸ ಮಾಡಿದ್ದಾರೆ. ಅವರಿಗೆ ಅವರದ್ದೇ ಆದ ವರ್ಚಸ್ಸು ಇದೆ ಎಂದರು.
ಇನ್ನು ಡಿಕೆ ಶಿವಕುಮಾರ್ ಅವರು ಸಹ ಲೀಡರ್ ಆಗಿ ಬೆಳೆದು ಬಂದವರು. ಹಲವು ಮುಖ್ಯಮಂತ್ರಿಗಳ ಕೈಕೆಳಗೆ ಸಚಿವರಾಗಿ ಕೆಲಸ ಮಾಡಿದ್ದಾರೆ ಎಂದು ಹೇಳುವ ಮೂಲಕ ಸರ್ಜೇವಾಲ ಅವರು, ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ.
ನಾಯಕತ್ವ ಬದಲಾವಣೆ ಕುರಿತು ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ನಡುವೆಯೇ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಿಢೀರ್ ಮುಂಬೈಗೆ ತೆರಳಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಅವರ ಈ ಅಚಾನಕ್ ಪ್ರವಾಸದ ಹಿಂದೆ ರಾಜಕೀಯ ಕಾರಣಗಳಿವೆಯೇ ಎಂಬ ಪ್ರಶ್ನೆಗಳು ಮೂಡತೊಡಗಿವೆ.
ಮುಖ್ಯಮಂತ್ರಿಗಳು ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಕರೆದಿದ್ದು, ಈ ಸಭೆಗೆ ಎಲ್ಲ ಸಚಿವರಿಗೂ ಆಹ್ವಾನಿಸಲಾಗಿದೆ.
ಎಲ್ಲಾ ಸಚಿವರಿಗೂ ಮುಖ್ಯಮಂತ್ರಿ ಕಚೇರಿಯಿಂದ ಸಂದೇಶ ರವಾನೆಯಾಗಿದೆ. ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ, ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಭಾಗಿಯಾಗುತ್ತಿದ್ದು, ಸಭೆಯಲ್ಲಿ ಸಿದ್ದರಾಮಯ್ಯ ತಮ್ಮ ವಿದಾಯ ಭಾಷಣ ಮಾಡಲಿದ್ದಾರೆ. ತಮ್ಮ ರಾಜೀನಾಮೆ ಬಗ್ಗೆ ಸಿಎಂ ಘೋಷಣೆ ಮಾಡಲಿದ್ದಾರೆ. ಸಭೆ ಹಿನ್ನೆಲೆಯಲ್ಲಿ ಸಿದ್ದರಾಯ್ಯ ನಿವಾಸದಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದೆ.
,ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಮೆನು ಹೀಗಿದೆ...
ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಸಂಪುಟ ಸಚಿವರು, ಶಾಸಕರಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯುತ್ತಿದ್ದು ಡಿಸಿಎಂ ಡಿ ಕೆ ಶಿವಕುಮಾರ್, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಪೊನ್ನಣ್ಣ, ರಾಮಲಿಂಗಾ ರೆಡ್ಡಿ ಸೇರಿದಂತೆ ಹಲವು ನಾಯಕರು ಮುಖ್ಯಮಂತ್ರಿಯವರ ನಿವಾಸಕ್ಕೆ ಆಗಮಿಸಿದ್ದಾರೆ.
ಬ್ರೇಕ್ ಫಾಸ್ಟ್ ಗೆ
ಮಸಾಲೆ ದೋಸೆ (ಲೈವ್ ಕೌಂಟರ್)
ಖಾರಾಬಾತ್
ಕೇಸರಿಬಾತ್
ಇಡ್ಲಿ
ಉದ್ದಿನ ವಡೆ
ಖಾರ ಪೊಂಗಲ್
ಕಾಫಿ / ಟೀ
ನೀರು
(ಸಾಂಬಾರ್, ಚಟ್ನಿ, ಸಾಗು/ಪಲ್ಯ ಇತ್ಯಾದಿ...) ಮೆನು ಇದೆ
ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆ ಬಹುತೇಕ ಖಚಿತವಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಉಪಮುಖ್ಯಮಂತ್ರಿ ಸ್ಥಾನಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕೈಗಾರಿಕಾ ಸಚಿವ ಎಂಬಿ.ಪಾಟೀಲ್, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.
ಕರ್ನಾಟಕ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಮಹತ್ವದ “ಬ್ರೇಕ್‌ಫಾಸ್ಟ್ ಮೀಟಿಂಗ್” ಆರಂಭಗೊಂಡಿದೆ.
ಈ ಸಭೆಯ ಬಳಿಕ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳ ನಡುವೆ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಎಚ್.ಕೆ.ಪಾಟೀಲ್ ಸೇರಿದಂತೆ ಹಲವು ಹಿರಿಯ ಸಚಿವರು ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದ್ದು, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಕೂಡ ಭಾಗಿಯಾಗಿದ್ದಾರೆಂದು ತಿಳಿದುಬಂದಿದೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಬ್ರೇಕ್‌ಫಾಸ್ಟ್ ಸಭೆಗೆ ಆಗಮಿಸಿದ್ದಾರೆ. ಸದಾಶಿವನಗರದಿಂದ ಹೊರಟ ಡಿಕೆಶಿ ಕಾವೇರಿ ನಿವಾಸಕ್ಕೆ 9:30ಕ್ಕೆ ಆಗಮಿಸಿದರು.
ಡಿಸಿಎಂ ಆಗಮನದ ವೇಳೆ ಸಿದ್ದರಾಮಯ್ಯ ಅವರ ಬೆಂಬಲಿಗರ ಸಿದ್ದರಾಮಯ್ಯಗೆ ಜೈಕಾರ ಹಾಕಿದ್ದು, 5 ವರ್ಷ ಸಿದ್ದು ಸಿಎಂ ಎಂದು ಘೋಷಣೆ ಕೂಗಿ ಡಿಕೆಶಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಬಹುತೇಕ ಖಚಿತವಾಗುತ್ತಿದ್ದು, ಇದರ ಬೆನ್ನಲ್ಲೇ ಡಿಕೆ.ಶಿವಕುಮಾರ್ ಅವರ ನಿವಾಸದ ಬಳಿ ಅವರ ಅಭಿಮಾನಿಗಳು ಸಂಭ್ರಮವನ್ನಾಚರಿಸುತ್ತಿದ್ದಾರೆ. ಡಿಕೆ.ಶಿವಕುಮಾರ್ ಅವರ ನಿವಾಸದ ಬಳಿ ಧಾವಿಸಿರುವ ಅಭಿಮಾನಿಗಳು, ಸಿಹಿ ಹಂಚಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಸಚಿವರೊಂದಿಗಿನ ಬ್ರೇಕ್‌ಫಾಸ್ಟ್ ಮೀಟಿಂಗ್ ನಲ್ಲಿ ಮಾತನಾಡಿರುವ ಮುಖ್ಯಮಂತ್ರಿಗಳು, ಹೈಕಮಾಂಡ್ ಹೇಳುವುದನ್ನು ಪಾಲನೆ ಮಾಡುವುದು ನನ್ನ ಕರ್ತವ್ಯ. ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆಂದು ಹೇಳಿದ್ದಾರೆಂದು ತಿಳಿದುಬಂದಿದೆ.
ಯಾವುದೇ ರೀತಿಯ ದುಡುಕಿನ ಹೇಳಿಕೆ ಬೇಡ ಎಂದು ಬೆಂಬಲಿಗರಿಗೆ ಡಿಕೆ ಶಿವಕುಮಾರ್ ಖಡಕ್ ಸೂಚನೆ ಕೊಟ್ಟಿದ್ದಾರೆ ಎಂಬುದು ತಿಳಿದುಬಂದಿದೆ.
ಹೈಕಮಾಂಡ್ ನಾಯಕರು ನನ್ನ ಜೊತೆಗೆ ಏನೂ ಮಾತನಾಡಿಲ್ಲ, ಎಲ್ಲವನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತನಾಡಿದ್ದಾರೆ. ಸಿಎಂ ರಾಜೀನಾಮೆ ವಿಷಯವೂ ಗೊತ್ತಿಲ್ಲ ಎಂದು ತಮ್ಮನ್ನು ಭೇಟಿಯಾದ ಸಚಿವರು, ಶಾಸಕರಿಗೆಲ್ಲ ಡಿಕೆಶಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಮಧ್ಯಾಹ್ನ 2.30ಕ್ಕೆ ರಾಜೀನಾಮೆ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತೇನೆಂದು ತಿಳಿಸಿದ್ದಾರೆ.
ರಾಜ್ಯಪಾಲರು ಇಲ್ಲದೇ ಇದ್ದರೆ ಅವರ ಕಾರ್ಯದರ್ಶಿಗೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. 3 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.
ಕಾವೇರಿ ನಿವಾಸದಲ್ಲಿ ನಡೆದ ಉಪಾಹಾರ ಸಭೆಯ ಬಳಿಕ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ, ಮಧ್ಯಾಹ್ನ 3 ಗಂಟೆಗೆ ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆಲಿಂಗನ ಮಾಡುವ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಹಂಚಿಕೊಂಡಿದ್ದು, ಅಂದು, ಇಂದು, ಎಂದೆಂದು... ಒಗ್ಗಟ್ಟೇ ನಮ್ಮ ಶಕ್ತಿ! ಎಂದೆಂದಿಗೂ ಜನಸೇವೆಯೇ ನಮ್ಮ ಬದ್ಧತೆ’ ಎಂದು ಬರೆದುಕೊಂಡಿದೆ.
ಇಷ್ಟು ವರ್ಷಗಳು ನಮಗೆಲ್ಲರಿಗೂ ಮಾರ್ಗದರ್ಶನ ನೀಡಿದ್ದಕ್ಕಾಗಿ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ್ದೇವೆ. ಅವರು ನಿಮ್ಮೊಂದಿಗೆ ಮಾತನಾಡಲಿದ್ದಾರೆ’ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದ ಅಂತರಿಕ ಕಚ್ಚಾಟದಿಂದ ಅಡಳಿತ ಯಂತ್ರ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಕಳೆದ ಮೂರು ವರ್ಷಗಳಲ್ಲಿ ಅರ್ಥಿಕವಾಗಿ ಹಾಗೂ ಆಡಳಿತಾತ್ಮಕವಾಗಿ ಕರ್ನಾಟಕದ ಪರಿಸ್ಥಿತಿ ಸಂಪೂರ್ಣವಾಗಿ ನೆಲಕಚ್ಚಿದೆ. ಸಾಮಾನ್ಯ ಜನರು ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಗೆ ಬೇಸತ್ತಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ.
ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ, ಹೈಕಮಾಂಡ್ ಅವರ ರಾಜೀನಾಮೆಯನ್ನು ಸೂಚಿಸಿದ್ದು, ಅವರು ಸಂತೋಷದಿಂದ ಒಪ್ಪಿಕೊಂಡಿದ್ದಾರೆ, ಡಿಕೆ ಶಿವಕುಮಾರ್ ಅವರನ್ನು ಮುಂದಿನ ಸಿಎಂ ಆಗಿ ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ರಾಜ್ಯಸಭೆಗೆ ಹೋಗುತ್ತಿಲ್ಲ. 3 ಗಂಟೆಗೆ ರಾಜಭವನಕ್ಕೆ ಹೋಗುತ್ತಿದ್ದಾರೆಂದು ಸಚಿವ ಹೆಚ್.ಕೆ.ಪಾಟೀಲ್ ಆವರು ಹೇಳಿದ್ದಾರೆ.
ಭಿನ್ನಮತಕ್ಕೆ ಯಾವುದೇ ಅವಕಾಶ ಇಲ್ಲ: ಸಚಿವ ಪಾಟೀಲ್
ಕರ್ನಾಟಕ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಹಾಗೂ ಇತರ ಸಚಿವರಿಗೆ ರಾಜೀನಾಮೆ ನೀಡುವ ನಿರ್ಧಾರವನ್ನು ತಿಳಿಸಿದ್ದಾಗಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಉತ್ತರಾಧಿಕಾರಿಯಾಗಲಿದ್ದಾರೆ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.
ಮುಖ್ಯಮಂತ್ರಿಯವರೊಂದಿಗೆ ನಡೆದ ಉಪಹಾರ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಪಾಟೀಲ್, ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸಲು ಲೋಕಭವನಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು. ಜೊತೆಗೆ, ನಾಯಕತ್ವ ಬದಲಾವಣೆ ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.
ಸಚಿವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಹೈಕಮಾಂಡ್ ಜೊತೆ ನಡೆದ ಚರ್ಚೆಗಳ ಉಲ್ಲೇಖ ಮಾಡುತ್ತಾ ಮುಖ್ಯಮಂತ್ರಿ ಅವರು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಎಲ್ಲಿಯೂ ಭಿನ್ನಮತಕ್ಕೆ ಅವಕಾಶವೇ ಇಲ್ಲ.
ಇದು ಏಕಮತದ ತೀರ್ಮಾನವಾಗಿದ್ದು, ಹೈಕಮಾಂಡ್ ಹೇಳಿರುವುದಕ್ಕೆ ಎಲ್ಲರೂ ಒಪ್ಪಿದ್ದಾರೆ,” ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಾಹ್ನ 2:30 ಕ್ಕೆ ಲೋಕಭವನಕ್ಕೆ ಭೇಟಿ ನೀಡಲಿದ್ದು, ಇಂದು ಮಧ್ಯಾಹ್ನ 3:00 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಉಪಾಹಾರ ಕೂಟದ ಸಮಯದಲ್ಲಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ನಿರ್ಧಾರವನ್ನು ಘೋಷಿಸಿದ ನಂತರ ಈ ಬೆಳವಣಿಗೆ ಕಂಡುಬಂದಿದೆ.
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ ದೆಹಲಿ ತಲುಪಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ದೆಹಲಿಯಲ್ಲಿ ನಡೆಯುವ ಸಭೆಗಳಲ್ಲಿ ಹೊಸ ಸಚಿವರ ಆಯ್ಕೆ ಹಾಗೂ ರಾಜ್ಯಸಭೆಗೆ ಸಂಬಂಧಿಸಿದ ಚರ್ಚೆಗಳು ಪ್ರಮುಖವಾಗಲಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸಲು ಲೋಕಭವನಕ್ಕೆ ತಲುಪಿದ್ದಾರೆ. ಸಿದ್ದರಾಮಯ್ಯ ಕುಳಿತಿದ್ದ ಕಾರನ್ನು ಅವರ ಆಪ್ತ ಬೈರತಿ ಸುರೇಶ್ ಚಲಾಯಿಸುತ್ತಿದ್ದರು.
ಲೋಕಭವನಕ್ಕೆ ತೆರಳುವಾಗ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಹಲವಾರು ಹಿರಿಯ ಸಚಿವರು ಸಿದ್ದರಾಮಯ್ಯ ಅವರೊಂದಿಗೆ ಇದ್ದರು.
ವರದಿಗಳ ಪ್ರಕಾರ, ಕರ್ನಾಟಕ ರಾಜ್ಯಪಾಲ ಗೆಹ್ಲೋಟ್ ಅವರು ಇಂದು ಬೆಂಗಳೂರಿಗೆ ಹಿಂತಿರುಗಲಿದ್ದು, ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಸ್ವೀಕರಿಸಲಿದ್ದಾರೆ.
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕೌಟುಂಬಿಕ ತುರ್ತು ಪರಿಸ್ಥಿತಿಯ ನಿಮಿತ್ತ ಬೆಂಗಳೂರಿನಿಂದ ತೆರಳಿದ್ದರು.
'ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ' ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಲೇ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನಗರದಲ್ಲಿ ಇಲ್ಲದ ಕಾರಣ, ನಾನು ನನ್ನ ರಾಜೀನಾಮೆ ಪತ್ರವನ್ನು ಅವರ ವಿಶೇಷ ಕಾರ್ಯದರ್ಶಿಗೆ ನೀಡಿದ್ದೇನೆ ಎಂದು ತಿಳಿಸಿದರು.
ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ರಾಜ್ಯಪಾಲರು ನನ್ನ ರಾಜೀನಾಮೆಯನ್ನು ಸ್ವೀಕರಿಸುತ್ತಾರೆ ಎಂಬ ವಿಶ್ವಾಸ ನನಗಿದೆ.
ಹೈಕಮಾಂಡ್ ಹೇಳಿದಾಗ ರಾಜೀನಾಮೆ ನೀಡುತ್ತೇನೆ ಎಂದು ನಾನು ಪದೇ ಪದೇ ಹೇಳಿದ್ದೆ. ಹೈಕಮಾಂಡ್ ಎರಡು ದಿನಗಳ ಹಿಂದೆ ರಾಜೀನಾಮೆ ನೀಡುವಂತೆ ಸೂಚಿಸಿತ್ತು, ಅದರಂತೆ ಇಂದು ನಾನು ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಎರಡು ಬಾರಿ ಕರ್ನಾಟಕದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.
550 ಭರವಸೆಗಳಲ್ಲಿ, ಸುಮಾರು 300 ಭರವಸೆಗಳನ್ನು ಇಲ್ಲಿಯವರೆಗೆ ಈಡೇರಿಸಲಾಗಿದೆ, ಜೊತೆಗೆ ಐದು ಗ್ಯಾರಂಟಿಗಳು. ನಾನು ನೀಡಿದ ಭರವಸೆಗಳಿಂದ ವಿಮುಖನಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ವಿರೋಧ ಪಕ್ಷಗಳು ನನ್ನ ವಿರುದ್ಧ ಹಲವು ಸುಳ್ಳು ಕಥೆಗಳನ್ನು ಕಟ್ಟಿದೆ. 'ನಾನು ಹಣವನ್ನು ಬೆನ್ನಟ್ಟಿಲ್ಲ ಅಥವಾ ಆಸ್ತಿಗಳನ್ನು ಮಾಡಿಕೊಳ್ಳಲು ಹಂಬಲಿಸಿಲ್ಲ, ನನ್ನ ರಾಜಕೀಯ ಜೀವನವು ತೆರೆದ ಪುಸ್ತಕ' ಎಂದು ಸಿದ್ದರಾಮಯ್ಯ ಹೇಳಿದರು.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ವರಿಷ್ಠರು ತಮಗೆ ರಾಜ್ಯಸಭಾ ಸ್ಥಾನ ನೀಡುವುದಾಗಿ ಹೇಳಿದ್ದರು, ಆದರೆ ತಾವು ಅದನ್ನು ನಿರಾಕರಿಸಿರುವುದಾಗಿ ಹೇಳಿದರು.
"ರಾಷ್ಟ್ರ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲದ ಕಾರಣ ನಾನು ಅದನ್ನು ನಯವಾಗಿ ನಿರಾಕರಿಸಿದೆ" ಎಂದು ಸಿದ್ದರಾಮಯ್ಯ ಹೇಳಿದರು.
ಸಂವಿಧಾನದ ವಿರುದ್ಧ ಕೆಲಸ ಮಾಡುವವರ ವಿರುದ್ಧ ಹೋರಾಟ ಮುಂದುವರಿಸುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು.
"ನನ್ನ ಕೊನೆಯ ಉಸಿರು ಇರುವವರೆಗೂ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಡುತ್ತೇನೆ" ಎಂದು ಸಿದ್ದರಾಮಯ್ಯ ಹೇಳಿದರು.
ಶಾಸಕನಾಗಿ ಸೇವೆ ಸಲ್ಲಿಸಲು ಇನ್ನೂ ಎರಡು ವರ್ಷ ಬಾಕಿ ಇರುವುದರಿಂದ ರಾಜ್ಯ ರಾಜಕಾರಣದಲ್ಲಿಯೇ ಇರುತ್ತೇನೆ. ಮುಂದಿನ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷ ಮತ್ತು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯನವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಬೆಂಗಳೂರಿನಿಂದ ನವದೆಹಲಿಗೆ ತೆರಳಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಕರ್ನಾಟಕದ ಜನರು ನೀಡಿದ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದ ಹೇಳುವ ಗುರುವಾರ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದಾರೆ.
ಸಿದ್ದರಾಮಯ್ಯ ಅವರು ಕೃತಜ್ಞತೆಯ ಸೂಚಕವಾಗಿ ಮೊದಲು ವೇದಿಕೆಯ ಮೇಲೆ ಕೈಜೋಡಿಸಿ ನಿಂತಿರುವ ಛಾಯಾಚಿತ್ರವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.
ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ಸೇರುವ ಸಾಧ್ಯತೆ ಇದ್ದು, ಅದೇ ದಿನ ಹೊಸ ಮುಖ್ಯಮಂತ್ರಿ ಮತ್ತು ಅವರ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ.
ಮೂಲಗಳ ಪ್ರಕಾರ, ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದು ಅವರ ವೈಯಕ್ತಿಕ ಜ್ಯೋತಿಷಿ ಸೂಚಿಸುವ ಶುಭ ಸಮಯದ ಮೇಲೆ ಅವಲಂಬಿತವಾಗಿರುವುದರಿಂದ ಭಾನುವಾರ ಪ್ರಮಾಣ ವಚನ ಸ್ವೀಕಾರ ನಡೆಯುವ ಸಾಧ್ಯತೆಯೂ ಇದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಲ್ಲದೆ, ಲೋಕಸಭೆಯ ಎಲ್‌ಒಪಿ ರಾಹುಲ್ ಗಾಂಧಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಲಾಗುವುದು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ, ಸಿದ್ದರಾಮಯ್ಯ ಮತ್ತು ಅವರ ಸಂಭಾವ್ಯ ಉತ್ತರಾಧಿಕಾರಿ ಎಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗುರುವಾರ ನವದೆಹಲಿಗೆ ಪ್ರತ್ಯೇಕವಾಗಿ ತೆರಳಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ, ರಾಜ್ಯದಲ್ಲಿ ಹೊಸ ಸಚಿವ ಸಂಪುಟ ರಚಿಸುವ ವಿಧಾನಗಳ ಕುರಿತು ಚರ್ಚಿಸಲು ಇಬ್ಬರು ನಾಯಕರು ಕಾಂಗ್ರೆಸ್ ಹೈಕಮಾಂಡ್ ಅನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
ಪಕ್ಷದ ಮೂಲಗಳ ಪ್ರಕಾರ, ಹೊಸ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ, ಸಚಿವ ಸಂಪುಟ ರಚನೆ ಮತ್ತು ಶಿವಕುಮಾರ್ ಅವರು ಪ್ರಸ್ತುತ ಹೊಂದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನ ಸೇರಿದಂತೆ ಇತರ ಸಾಂಸ್ಥಿಕ ವಿಷಯಗಳಿಗೆ ಸಂಬಂಧಿಸಿದ ಚರ್ಚೆಗಳು ದೆಹಲಿ ಭೇಟಿಯ ಸಮಯದಲ್ಲಿ ನಡೆಯುವ ಸಾಧ್ಯತೆಯಿದೆ.
ಈ ವಿಷಯಗಳ ಬಗ್ಗೆ ಒಂದು ಅಥವಾ ಎರಡು ದಿನಗಳಲ್ಲಿ ಸ್ಪಷ್ಟತೆ ಸಿಗಬಹುದು ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ.
ರಾಜ್ಯ ಸಚಿವ ಸಂಪುಟ ವಿಸರ್ಜನೆಗೊಂಡಿರುವ ಬಗ್ಗೆ ಗೆಜೆಟ್ ಅಧಿಸೂಚನೆ ಪ್ರಕಟವಾಗಿದ್ದು, ಸಚಿವರಿಗೆ ಹಂಚಿಕೆಯಾಗಿದ್ದ ಸರ್ಕಾರಿ ವಾಹನಗಳನ್ನು ವಾಪಸ್ ತೆಗೆದುಕೊಳ್ಳಲಾಗಿದೆ.
ಹೀಗಾಗಿ ಶಾಸಕರೆಲ್ಲರೂ ಖಾಸಗಿ ವಾಹನಗಳಿಗೆ ಶಿಫ್ಟ್ ಆಗಿದ್ದಾರೆ. ಇನ್ನೊಂದೆಡೆ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಹಾಕಿದ್ದ ಸರ್ಕಾರಿ ನಾಮಫಲಕಗಳನ್ನೂ ತೆರವುಗೊಳಿಸಲಾಗಿದೆ.
ನಾಳೆ (ಮೇ 30) ಶಾಸಕಾಂಗದ ಸಭೆ ನಡೆಯಲಿದ್ದು, CLP ಸಭೆಯಲ್ಲಿ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಲಿದೆ.
ಸದ್ಯಕ್ಕೆ ಸಭೆಯ ಬಗ್ಗೆ ಕಾಂಗ್ರೆಸ್ ಶಾಸಕರಿಗೆ ಮಾಹಿತಿ ನೀಡಲಾಗಿದ್ದು, ಶಾಸಕರು ಬೆಂಗಳೂರಿನಲ್ಲಿಯೇ ಇರುವಂತೆ ಸೂಚಿಸಲಾಗಿದೆ.
ರಾಜೀನಾಮೆ ಸಲ್ಲಿಸಿ ಇಂದು ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಅವರು, ದೆಹಲಿಯ 10 ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ನಿವಾಸಕ್ಕೆ ಆಗಮಿಸಿದ್ದಾರೆ. ಸೋನಿಯಾ ಜೊತೆ ರಾಹುಲ್ ಗಾಂಧಿಯನ್ನೂ ಭೇಟಿ ಮಾಡಿದ ಸಿದ್ದರಾಮಯ್ಯ, ಇಬ್ಬರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.
ದೆಹಲಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯರನ್ನು ಭೇಟಿ ಮಾಡಿದ ಬಳಿಕ, ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದ ಬೆನ್ನಲ್ಲೇ, ರಾಜ್ಯದಲ್ಲಿ ಹೊಸ ಸಿಎಂ ಆಗಿ ಡಿಕೆ ಶಿವಕುಮಾರ್ ಸಜ್ಜಾಗಿದ್ದಾರೆ. ಈ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಸ್ಥಾನವೂ ತೆರವಾಗಲಿದ್ದು, ಈ ಸ್ಥಾನವನ್ನು ಅಲಂಕರಿಸುವಂತೆ ಸತೀಶ್ ಜಾರಕಿಹೊಳಿಗೆ ಹೈಕಮಾಂಡ್‌ನಿಂದ ಆಫರ್ ಸಿಕ್ಕಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿ ಮಾಡಿದ ಬಳಿಕ ಸಿದ್ದರಾಮಯ್ಯ ದೆಹಲಿಯ ಲೋದಿ ರಸ್ತೆಯಲ್ಲಿರುವ ಕೆ.ಸಿ.ವೇಣುಗೋಪಾಲ್ ನಿವಾಸಕ್ಕೆ ತೆರಳಿದ್ದು, ವೇಣುಗೋಪಾಲರನ್ನು ಭೇಟಿಯಾಗಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ದೆಹಲಿಯ ಐಟಿಸಿ ಮೌರ್ಯ ಹೋಟೆಲ್'ಗೆ ಡಿಕೆ.ಶಿವಕುಮಾರ್ ಅವರು ಭೇಟಿ ನೀಡಿದ್ದು, ಇಬ್ಬರೂ ಒಟ್ಟಿಗೆ ಊಟ ಮಾಡಿ, ಹಲವು ವಿಷಯಗಳನ್ನು ಚರ್ಚಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಮರಳಿದ ಬಳಿಕ ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಿಗದಿಪಡಿಸಲಾಗಿದೆ.
ಶನಿವಾರ ಸಂಜೆ ನಾಲ್ಕು ಗಂಟೆಗೆ ಸಭೆ ನಡೆಯಲಿದ್ದು, ಸದ್ಯ ದೆಹಲಿಗೆ ಹೋಗಿರುವ ಶಾಸಕರಿಗೆ ಬೆಂಗಳೂರಿಗೆ ಬರುವಂತೆ ತಿಳಿಸಲಾಗಿದೆ ಎಂದು ತಿಳಿದುಬಂದಿದೆ.
ಕರ್ನಾಟಕದ ಹೊಸ ಸರ್ಕಾರ ರಚನೆ ಕುರಿತು ಚರ್ಚಿಸಲು, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ನಾಯಕ ಕೆ.ಜೆ. ಜಾರ್ಜ್ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರ ಉನ್ನತ ಮಟ್ಟದ ಸಭೆ ಶುಕ್ರವಾರ ದೆಹಲಿಯಲ್ಲಿ ನಡೆಯಿತು.।
ಇದಕ್ಕೂ ಮೊದಲು, ಡಿ.ಕೆ. ಶಿವಕುಮಾರ್ ಅವರು ರಾಷ್ಟ್ರ ರಾಜಧಾನಿಯೊಂದಿನ ಹೋಟೆಲ್‌ನಲ್ಲಿ ಕಾಂಗ್ರೆಸ್‌ನ ಇತರೆ ನಾಯಕರನ್ನೂ ಭೇಟಿಯಾದರು. ಗುರುವಾರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಈ ರಾಜಕೀಯ ಬೆಳವಣಿಗೆಗಳು ನಡೆದಿದೆ.
ಬಳಿಕ ನಾಯಕರೆಲ್ಲರೂ ಒಟ್ಟುಸೇರಿ ಭೋಜನ ಸವಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆಗಳು ಆರಂಭವಾಗಿವೆ.
ಡಿಕೆ ಶಿವಕುಮಾರ್ ಅವರು ಸೋಮವಾರ ಗೋಧೂಳಿ ಸಮಯದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಸಿದ್ಧತೆಗಳು ನಡೆಯುತ್ತಿರುವಂತೆಯೇ ಸಚಿವ ಸ್ಥಾನಕ್ಕಾಗಿ ಲಾಬಿ ತೀವ್ರಗೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಲು ಹಲವು ಆಕಾಂಕ್ಷಿಗಳು ನವದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.
ಡಿಕೆ ಶಿವಕುಮಾರ್ ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಹೊಸ ನಾಯಕರಾಗಿ ಆಯ್ಕೆಯಾಗುವ ನಿರೀಕ್ಷೆಯಿದೆ. ಹೊಸ ಸಚಿವ ಸಂಪುಟದ ರಚನೆ ಹಾಗೂ ಅಧಿಕಾರ ಬದಲಾವಣೆ ಕುರಿತು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರೂ ಶುಕ್ರವಾರ ಕಾಂಗ್ರೆಸ್ ವರಿಷ್ಠರೊಂದಿಗೆ ಚರ್ಚೆ ನಡೆಸಿದ್ದಾರೆ.
ಸಿದ್ದರಾಮಯ್ಯ ಅವರ ಮಗ ಮತ್ತು ವಿಧಾನ ಪರಿಷತ್ ಸದಸ್ಯ ಯತೀಂದ್ರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಲು ತಮ್ಮ ತಂದೆಯೊಂದಿಗೆ ಬಂದಿರುವುದು ಅವರ ಸಂಪುಟ ಸೇರ್ಪಡೆ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ. ಸಿದ್ದರಾಮಯ್ಯ ಸಂಪುಟದಲ್ಲಿದ್ದ ಕೆಲವು ಹಿರಿಯ ಸಚಿವರಾದ ಡಾ. ಜಿ. ಪರಮೇಶ್ವರ, ಎಂ. ಬಿ. ಪಾಟೀಲ್, ಕೆ. ಎಚ್. ಮುನಿಯಪ್ಪ, ಕೆ. ಜೆ. ಜಾರ್ಜ್, ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ ಮತ್ತು ಬೋಸರಾಜು ದೆಹಲಿಯಲ್ಲಿದ್ದಾರೆ. ಪಕ್ಷವು ಅವರಲ್ಲಿ ಕೆಲವರನ್ನು ಚರ್ಚೆಗಾಗಿ ರಾಷ್ಟ್ರ ರಾಜಧಾನಿಗೆ ಕರೆಸಿದೆ ಎನ್ನಲಾಗಿದೆ.
ಇನ್ನೂ ಸಚಿವ ಸ್ಥಾನದ ಆಕಾಂಕ್ಷಿಗಳಾದ ರಿಜ್ವಾನ್ ಅರ್ಷದ್, ಶಿವಲಿಂಗೇಗೌಡ, ನಾರಾಯಣಸ್ವಾಮಿ, ಕೆ. ವೈ. ನಂಜೇಗೌಡ, ಕೊತ್ತೂರು ಜಿ. ಮಂಜುನಾಥ್, ಶ್ರೀನಿವಾಸ್ ಮಾನೆ, ಯಾಸಿರ್ ಅಹ್ಮದ್ ಖಾನ್ ಪಠಾಣ್ ದೆಹಲಿಯಲ್ಲಿದ್ದಾರೆ. ಎಂಎಲ್‌ಸಿಗಳಾದ ನಾಸೀರ್ ಅಹ್ಮದ್, ಸಲೀಮ್ ಅಹ್ಮದ್ ಮತ್ತು ಅನಿಲ್ ಕುಮಾರ್ ಕೂಡ ರಾಷ್ಟ್ರ ರಾಜಧಾನಿಯಲ್ಲಿದ್ದಾರೆ. ನಾರಾಯಣಸ್ವಾಮಿ ಮತ್ತು ಕೆ. ವೈ. ನಂಜೇಗೌಡ ಸೇರಿದಂತೆ ಕೋಲಾರದ ಶಾಸಕರು ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಜಿಲ್ಲೆಯ ಕೆಲವರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ.
ಇಂದು ಅಪರಾಹ್ನ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಗೆ ಮುನ್ನ ಡಿ.ಕೆ. ಶಿವಕುಮಾರ್ ಅವರು ಲೋಕಭವನಕ್ಕೆ ಆಗಮಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರನ್ನು ಭೇಟಿ ಮಾಡಿದ್ದಾರೆ.
ಕರ್ನಾಟಕದಲ್ಲಿ ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ಚಟುವಟಿಕೆಗಳು ವೇಗ ಪಡೆದುಕೊಂಡಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳ ಲಾಬಿ ತೀವ್ರಗೊಂಡಿದೆ. ಹಲವಾರು ಶಾಸಕರು ಮತ್ತು ನಾಯಕರು ಸಚಿವ ಸ್ಥಾನ ಪಡೆಯಲು ಕಾಂಗ್ರೆಸ್ ಹೈಕಮಾಂಡ್ ಮುಂದೆ ಮನವಿ ಸಲ್ಲಿಸುವ ಉದ್ದೇಶದಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.
ಹೊಸ ಮುಖ್ಯಮಂತ್ರಿ ಆಯ್ಕೆಯ ಪ್ರಕ್ರಿಯೆ ಅಂತಿಮ ಹಂತದಲ್ಲಿರುವ ಹಿನ್ನೆಲೆಯಲ್ಲಿ, ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಆಕಾಂಕ್ಷಿಗಳು ಕಾಂಗ್ರೆಸ್ ನಾಯಕತ್ವದ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರ ಹೆಸರು ಬಹುತೇಕ ಖಚಿತವಾಗಿರುವ ಸಂದರ್ಭದಲ್ಲಿ, ಸಚಿವ ಸಂಪುಟದ ರಚನೆ ಮತ್ತು ಖಾತೆಗಳ ಹಂಚಿಕೆ ಕುರಿತು ಪಕ್ಷದೊಳಗೆ ಚರ್ಚೆಗಳು ಜೋರಾಗಿವೆ.
ಇಂದು ಬೆಳಗ್ಗೆ ಲೋಕಭವನದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಡಿ ಕೆ ಸುರೇಶ್ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಅನೌಪಚಾರಿಕ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕಾರದ ತಾತ್ಕಾಲಿಕ ವೇಳಾಪಟ್ಟಿ ಹಾಗೂ ರಾಜ್ಯಪಾಲರ ಲಭ್ಯತೆ ಕುರಿತು ಚರ್ಚಿಸಿದ್ದಾರೆ. ಜೂನ್ 1, 3, ಮತ್ತು 5— ಮೂರು ಪರ್ಯಾಯ ದಿನಾಂಕಗಳನ್ನು ಪ್ರಸ್ತಾಪಿಸಲಾಗಿದ್ದು, ರಾಜ್ಯಪಾಲರ ಲಭ್ಯತೆ ನೋಡಿಕೊಂಡು ನಿರ್ಧರಿಸಲಾಗುವುದು ಎನ್ನಲಾಗುತ್ತಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಗಳೂರಿನ ‘ಕಾವೇರಿ’ ನಿವಾಸಕ್ಕೆ ಕಾಂಗ್ರೆಸ್ ಶಾಸಕರು ಮತ್ತು ಪ್ರಮುಖ ನಾಯಕರು ಇಂದು ಅಪರಾಹ್ನ ಸಿಎಲ್ಪಿ ಸಭೆಗೆ ಮುನ್ನ ಭೇಟಿ ನೀಡುತ್ತಿದ್ದಾರೆ. ನಾಯಕರಾದ ಕೆ.ಜೆ. ಜಾರ್ಜ್, ಎ.ಎಸ್. ಪೊನ್ನಣ್ಣ, ಪುಟ್ಟರಂಗಶೆಟ್ಟಿ ಹಾಗೂ ಬಿಲ್ಕೀಸ್ ಬಾನು ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಸಿಎಂ ಹುದ್ದೆಯಿಂದ ನಿರ್ಗಮಿಸುವ ಮುನ್ನ ಇಂದು ಸಿದ್ದರಾಮಯ್ಯ ಅವರು ತಮ್ಮ ಕಾವೇರಿ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ದೂರುಗಳನ್ನು ಸ್ವೀಕರಿಸಿದರು.
ರಾಜ್ಯದ ನೂತನ ಮತ್ತು 25ನೇ ಮುಖ್ಯಮಂತ್ರಿಯಾಗಿ(DK Shivakumar) ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ.
ಇಂದು ಅಪರಾಹ್ನ ಸಿಎಲ್‌ಪಿ ಸಭೆಯ ನಿರ್ಣಯದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರು ಹಿರಿಯ ನಾಯಕರೊಂದಿಗೆ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಬಂದಿದ್ದಾರೆ.
ಶಾಸಕರ ಬೆಂಬಲ ಪತ್ರವನ್ನು ಹಸ್ತಾಂತರಿಸಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು ಜೂನ್ 3ರ ಬುಧವಾರದಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಅಥವಾ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲಿ ಅದ್ಧೂರಿ ಪ್ರಮಾಣವಚನ ಸಮಾರಂಭ ಆಯೋಜಿಸಲು ಸಿದ್ಧತೆಗಳು ನಡೆದಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಬೆಂಗಳೂರಿಗೆ ಆಗಮಿಸಿದ್ದಾರೆ.
ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜೂನ್ 3 ರಂದು ಲೋಕ ಭವನದ ಗಾಜಿನ ಮನೆಯಲ್ಲಿ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಶೇಖರ್ ಶನಿವಾರ ತಿಳಿಸಿದರು.
ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಶನಿವಾರ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಅವರು ಅಧಿಕಾರ ವಹಿಸಿಕೊಳ್ಳಲು ದಾರಿ ಸುಗಮವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಹಿರಿಯ ನಾಯಕ, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಶಾಸಕಾಂಗ ಪಕ್ಷದ ಹೊಸ ನಾಯಕರನ್ನಾಗಿ ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದರು.
ಸಭೆಯ ಮೇಲ್ವಿಚಾರಣೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ವಹಿಸಿದ್ದರು.
ಆದಾಗ್ಯೂ, ಹೊಸ ನಾಯಕನನ್ನು ಆಯ್ಕೆ ಮಾಡಲು ನಡೆದ ಸಿಎಲ್‌ಪಿ ಸಭೆಯು ಮಧ್ಯದಲ್ಲಿ ಬ್ರೇಕ್ ತೆಗೆದುಕೊಂಡಿತು. ಸಿದ್ದರಾಮಯ್ಯ, ವೇಣುಗೋಪಾಲ್ ಮತ್ತು ಸುರ್ಜೇವಾಲಾ ಸೇರಿದಂತೆ ಉನ್ನತ ನಾಯಕರು ಪ್ರತ್ಯೇಕ ಕೋಣೆಯಲ್ಲಿ ಸೇರಿ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಹೆಸರನ್ನು ಅಧಿಕೃತವಾಗಿ ಘೋಷಿಸಿದರು. ಇದರ ಬೆನ್ನಲ್ಲೇ ಇದೀಗ ಡಿಕೆ ಶಿವಕುಮಾರ್ ಅವರು ಲೋಕಭವನಕ್ಕೆ ತೆರಳಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಈ ವೇಳೆ ರಾಜ್ಯಪಾಲರು ಸರ್ಕಾರ ರಚನೆಗೆ ಡಿಕೆ ಶಿವಕುಮಾರ್ ಅವರಿಗೆ ಆಹ್ವಾನಿಸಿದರು.