ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶುಕ್ರವಾರ ಬೆಂಗಳೂರು ಮತ್ತು ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ನಗರ ಸಾರಿಗೆ, ವಿದ್ಯುತ್ ಪ್ರಸರಣ, ನವೀಕರಿಸಬಹುದಾದ ಇಂಧನ, ಪೆಟ್ರೋಲಿಯಂ ಮೂಲಸೌಕರ್ಯ, ತ್ಯಾಜ್ಯ ನಿರ್ವಹಣೆ ಹಾಗೂ ರೈಲ್ವೆ ಸೇರಿದಂತೆ ವಿವಿಧ ಕ್ಷೇತ್ರಗಳ ಒಟ್ಟು 15,600 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಹಾಗೂ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಬೆಳಗ್ಗೆ 10 ಗಂಟೆ ಸುಮಾರಿಗೆ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನ ಮಂತ್ರಿಗಳನ್ನು ಶಿಷ್ಠಾಚಾರ ಪ್ರಕಾರವಾಗಿ ರಾಜ್ಯಪಾಲೆ ಡಾ ಸುಧಾ ಯಾದವ್, ಸಿಎಂ ಡಿ ಕೆ ಶಿವಕುಮಾರ್ ಬರಮಾಡಿಕೊಂಡರು. ಹಲವು ಬಿಜೆಪಿ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗ್ಗೆ 10.45ಕ್ಕೆ ಜಿಗಣಿಯ ಎಸ್-ವ್ಯಾಸ ವಿಶ್ವವಿದ್ಯಾಲಯದ ಪ್ರಶಾಂತಿ ಕುಟೀರದಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬಳಿಕ ಮಧ್ಯಾಹ್ನ 12.45ಕ್ಕೆ ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್‌ನ ಎಲಿವೇಟೆಡ್ ಕಾರಿಡಾರ್ ರೈಲು ಸೇವೆಗೆ ಹಸಿರು ನಿಶಾನೆ ತೋರಿಸಲಿದ್ದಾರೆ.
ಮಧ್ಯಾಹ್ನ 1.15ಕ್ಕೆ ಭಾರತೀಯ ನಿರ್ವಹಣಾ ಸಂಸ್ಥೆ (ಐಐಎಂಬಿ) ಸಭಾಂಗಣದಲ್ಲಿ ನಡೆಯಲಿರುವ ಒಂದು ಗಂಟೆಯ ಕಾರ್ಯಕ್ರಮದಲ್ಲಿ 15,600 ಕೋಟಿ ರೂಪಾಯಿ ವೆಚ್ಚದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕೆಲವು ಯೋಜನೆಗಳನ್ನು ಉದ್ಘಾಟಿಸಿ, ಇನ್ನು ಕೆಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಮೈಸೂರಿಗೆ ಪ್ರಯಾಣ ಬೆಳೆಸಲಿರುವ ಪ್ರಧಾನಿ, 3.20ಕ್ಕೆ ಅಲ್ಲಿಗೆ ತಲುಪಲಿದ್ದಾರೆ. ಬಳಿಕ ಸಸಿ ನೆಡುವ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ನಂತರ ಕಾಸ್ಮೋಸ್-ಮೈಸೂರು ತಾರಾಲಯವನ್ನು ಉದ್ಘಾಟಿಸಲಿದ್ದಾರೆ. ಸಂಜೆ 6.05ಕ್ಕೆ ಮೈಸೂರಿನಿಂದ ನಿರ್ಗಮಿಸಲಿದ್ದಾರೆ.