ಕಾವೇರಿ ನಿರ್ವಹಣಾ ಮಂಡಳಿ ರಚಿಸಿ
ಚೆನ್ನೈ: ಕಾವೇರಿ ಜಲವಿವಾದ ನ್ಯಾಯಾಧಿಕರಣ ನೀಡುವ ಅಂತಿಮ ತೀರ್ಪಿನ ನಿಬಂಧನೆಗಳನ್ನು ಜಾರಿಗೊಳಿಸಲು ಕಾವೇರಿ ನಿರ್ವಹಣಾ ಮಂಡಳಿ ಮತ್ತು ಕಾವೇರಿ ಜಲ ನಿಯಂತ್ರಣ ಸಮಿತಿಯನ್ನು ರಚಿಸಬೇಕು ಎಂದು ತಮಿಳುನಾಡು ಸರ್ಕಾರ ಶುಕ್ರವಾರ ಕೇಂದ್ರ ಸರ್ಕಾರವನ್ನು ಕೋರಿದೆ.
ಪ್ರಧಾನಿ ಸಿಂಗ್ ಅವರಿಗೆ ತಮಿಳುನಾಡು ಸಿಎಂ ಜಯಲಲಿತಾ ಪತ್ರ ಬರೆದಿದ್ದು, ಅಧಿಸೂಚನೆಗಾಗಿ ಧನ್ಯವಾದ ಸಮರ್ಪಿಸಿದ್ದಾರೆ. ಜತೆಗೆ, ಉಳಿದ ನಿಬಂಧನೆಗಳನ್ನೂ ಜಾರಿಗೆ ತರುವಂತೆ ಮನವಿ ಮಾಡಿದ್ದಾರೆ. ಸುಪ್ರೀಂ ಕೋರ್ಟ್ಗೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಅರ್ಜಿ ಇತ್ಯರ್ಥವಾಗುವವರೆಗೆ ನಿರ್ವಹಣಾ ಮಂಡಳಿ ರಚಿಸದಂತೆ ಕೋರಿ ಕರ್ನಾಟಕ ಸಿಎಂ ಜಗದೀಶ್ ಶೆಟ್ಟರ್ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.