ನರೇಂದ್ರ ಮೋದಿಗೆ ಆಹ್ವಾನ: ವಾರ್ಟನ್ ವಿವಿಯಲ್ಲಿ ವಿವಾದ
ವಾಷಿಂಗ್ಟನ್: ಪೆನ್ಸೆಲ್ವೇನಿಯಾದ ವಾರ್ಟನ್ ವಿವಿಯ ವಿದ್ಯಾರ್ಥಿ ಸಂಘಟನೆಯು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಪ್ರಮುಖ ಭಾಷಣಕಾರನಾಗಿ ಆಹ್ವಾನ ನೀಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ವಾರ್ಟನ್ ಸ್ಕೂಲ್ ಆಫ್ ಯೂನಿವರ್ಸಿಟಿಯು ವಿದ್ಯಾರ್ಥಿಗಳ ಈ ನಿರ್ಧಾರದ ಕುರಿತು ಪುನರ್ ಪರಿಶೀಲಿಸುವ ಸಾಧ್ಯತೆ ಇದೆ. ವಿವಿ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ವಾರ್ಟನ್ ಇಂಡಿಯಾ ಎಕನಾಮಿಕ್ ಫೋರಂ ಹೆಸರಿನಲ್ಲಿ ಪ್ರತಿ ವರ್ಷ ವಾರ್ಷಿಕ ಸಮ್ಮೇಳನ ಆಯೋಜಿಸಲಾಗುತ್ತದೆ. ಇದರಲ್ಲಿ ಮೋದಿ ಅವರನ್ನು ಪ್ರಮುಖ ಭಾಷಣಕಾರರನ್ನಾಗಿ ಆಹ್ವಾನಿಸಲಾಗಿತ್ತು. ವಿದ್ಯಾರ್ಥಿಗಳ ಈ ಆಹ್ವಾನವನ್ನು ಒಪ್ಪಿಕೊಂಡಿದ್ದ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡುವುದರಲ್ಲಿದ್ದರು. ಆದರೆ, ಮೂಲಗಳ ಪ್ರಕಾರ ವಿವಿಯ ಆಡಳಿತ ಮಂಡಳಿಯು ಭಾಷಣಕಾರರ ಪಟ್ಟಿಯಿಂದ ಮೋದಿ ಹೆಸರು ಕೈಬಿಡುವಂತೆ ವಿದ್ಯಾರ್ಥಿಗಳನ್ನು ಕೇಳಿಕೊಳ್ಳುವ ಸಾಧ್ಯತೆ ಇದೆ. ಈ ಸಂಬಂಧ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿ ಸಂಘಟನೆಗಳ ನಡುವೆ ಅನೇಕ ಸುತ್ತಿನ ಮಾತುಕತೆಗಳೂ ನಡೆದಿವೆ ಎಂದು ಹೇಳಲಾಗಿದೆ. ಈ ಕುರಿತು ಅಂತಿಮ ನಿರ್ಧಾರ ಶೀಘ್ರವೇ ಹೊರಬೀಳುವ ಸಾಧ್ಯತೆ ಇದೆ. ಈ ಸಮ್ಮೇಳನಕ್ಕೆ ಯಾರ್ಯಾರನ್ನು ಮುಖ್ಯ ಭಾಷಣಕಾರರನ್ನಾಗಿ ಆಹ್ವಾನಿಸಬೇಕೆಂಬುದನ್ನು ವಿದ್ಯಾರ್ಥಿ ಸಂಘಟನೆಗಳೇ ನಿರ್ಧರಿಸುತ್ತವೆ. ಆದರೆ, ಈ ವಿಚಾರದಲ್ಲಿ ಆಡಳಿತ ಮಂಡಳಿ ಮಧ್ಯಪ್ರವೇಶಿಸಿದ್ದು ಇದೇ ಮೊದಲ ಬಾರಿಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.