ನವದೆಹಲಿ: ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಮತ್ತು ಅವುಗಳನ್ನು ತಡೆಗಟ್ಟುವಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿರುವ ಸುಪ್ರೀಂ ಕೋರ್ಟ್, ಈ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ವಿನೀತ್ ಧಂಡಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಚ್.ಎಲ್ ದತ್ತು ಮತ್ತು ನ್ಯಾ. ಎ.ಕೆ ಸಿಕ್ರಿ ಅವರನ್ನೊಳಗೊಂಡ ಪೀಠ, ಇದು ಒಳ್ಳೆಯ ಕಾರಣಕ್ಕೆ ಸಲ್ಲಿಸಿರುವ ಅರ್ಜಿಯಾಗಿದ್ದು, ಕೇಂದ್ರ ಹಾಗೂ ರಾಜ್ಯಗಳಿಗೆ ನೋಟಿಸ್ ನೀಡುವುದಾಗಿ ತಿಳಿಸಿದೆ. ಶಾಲೆ ಮತ್ತಿತರ ಪ್ರದೇಶಗಳಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ಇಂಥ ಘೋರ ಕೃತ್ಯಗಳನ್ನು ತಡೆಯಲು ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಸೂಚಿಸಿದೆ.