ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕರೆಯಲಾಗಿದ್ದ ಮುಖ್ಯಮಂತ್ರಿಗಳ ಸಭೆ ಅಂತ್ಯವಾಗಿದ್ದು, ಸಭೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಗೈರಾಗಿದ್ದರು.
ಯೋಜನಾ ಆಯೋಗಕ್ಕೆ ಪ್ರತಿಯಾಗಿ ಹೊಸ ಸಮಿತಿಯನ್ನು ತರುವ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ಮುಖ್ಯಮಂತ್ರಿಗಳ ಸಭೆಯನ್ನು ಕರೆಯಲಾಗಿದ್ದು, ಸಭೆಗೆ ಬಹತೇಕ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಆಗಮಿಸಿದ್ದರು. ಆದರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಗೈರಾಗಿದ್ದರು.
ಬುರ್ದ್ವಾನ್ ಸ್ಫೋಟ ಪ್ರಕರಣ ಮತ್ತು ಶರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಟಿಎಂಸಿ ನಡುವಿನ ವಾಕ್ಸಮರ ತಾರಕ್ಕೇರಿದ್ದು, ಈ ಹಿಂದಷ್ಟೇ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮಮತಾ ಬ್ಯಾನರ್ಜಿ ಅವರು, ಪ್ರಧಾನಿ ಮೋದಿ ಅವರ ನಿರಂಕುಶ ಆಡಳಿತದ ವಿರುದ್ಧ ವಿರೋಧ ಪಕ್ಷಗಳು ಒಗ್ಗಟ್ಟಾಗಬೇಕು ಎಂದು ಹೇಳಿದ್ದರು.
ಇದೇ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿಗಳ ಸಭೆಗೆ ಗೈರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಬೇರೆಯದೇ ರೀತಿಯ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ಸರ್ಕಾರದ ಕಾರ್ಯದರ್ಶಿಗಳು, ಈ ಹಿಂದೆಯೇ ಮಮತಾ ಅವರ ವೇಳಾಪಟ್ಟಿ ನಿಗದಿಯಾಗಿತ್ತು. ಹೀಗಾಗಿ ಅವರು ದೆಹಲಿ ಸಭೆಗೆ ತೆರಳಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.
ಅಂತೆಯೇ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕೂಡ ವಿಧಾನಸಭೆ ಚುನಾವಣೆಯ ನೆಪ ಹೇಳಿ ಸಭೆಯಿಂದ ತಪ್ಪಿಸಿಕೊಂಡಿದ್ದಾರೆ.
ಪ್ರಧಾನಿ ಮೋದಿ ಪ್ರಸ್ತಾಪಕ್ಕೆ ಮುಖ್ಯಮಂತ್ರಿಗಳ ವಿರೋಧ
ಇನ್ನು ಇಂದು ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಸ್ತಾಪಕ್ಕೆ ಬಹುತೇಕ ಮುಖ್ಯಮಂತ್ರಿಗಳು ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಯೋಜನಾ ಆಯೋಗದ ರದ್ಧತಿ ಚಿಂತನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.