ದೇಶ

'ಜಯಾ' ಜಾಮೀನು ಅವಧಿ 4 ತಿಂಗಳು ವಿಸ್ತರಣೆ

Srinivasamurthy VN

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಶಿಕ್ಷೆಗೆ ಗುರಿಯಾಗಿ ಜಾಮೀನು ಪಡೆದಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಜಾಮೀನು ಅವಧಿಯನ್ನು ಸುಪ್ರೀಂ ಕೋರ್ಟ್ ನಾಲ್ಕು ತಿಂಗಳ ಅವಧಿಗೆ ವಿಸ್ತರಿಸಿದೆ.

ಜಯಲಲಿತಾ ಅವರ ಪರ ವಕೀಲರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಚ್‌ಎಲ್ ದತ್ತು ಅವರ ನೇತೃತ್ವದ ನ್ಯಾಯಪೀಠ ಮೇಲ್ಮನವಿ ವಿಚಾರಣೆಗೆ ಪೀಠ ಸ್ಥಾಪನೆ ಮಾಡುವಂತೆ ಕರ್ನಾಟಕ ಹೈಕೋರ್ಟ್‌ಗೆ ಸೂಚನೆ ನೀಡಿದೆ. ಅಲ್ಲದೆ ಈ ವಿಚಾರಣೆ 3 ತಿಂಗಳೊಳಗೆ ಮುಕ್ತಾಯಗೊಳ್ಳಬೇಕು ಮತ್ತು ನಿಮಗೇನಾದರೂ ತೊಂದರೆಯಾದರೆ ನಮ್ಮ ಬಳಿ ಬನ್ನಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇನ್ನು ದೂರುದಾರ ಸುಬ್ರಮಣಿಯನ್ ಸ್ವಾಮಿ ಅವರು ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದ್ದ ದಾಖಲೆಗಳನ್ನು ಸುಪ್ರೀಂಕೋರ್ಟ್ ಪೀಠಕ್ಕೆ ಸಲ್ಲಿಸಬೇಕು ಎಂದು ನ್ಯಾಯಪೀಠ ಸೂಚನೆ ನೀಡಿದೆ.

ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ದೋಷಿ ಎಂದು ತೀರ್ಪು ನೀಡಿದ್ದ ಸಿಬಿಐ ವಿಶೇಷ ಕೋರ್ಟ್ ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಅಕ್ಟೋಬರ್ 17ರಂದು ಜಯಲಲಿತಾ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿತ್ತು. ಅಲ್ಲದೆ ಡಿ.18ರೊಳಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬೇಕು ಎಂದು ಸೂಚನೆ ನೀಡಿತ್ತು. ಅಂತೆಯೇ ಒಂದು ದಿನ ತಡವಾದರೂ ಜಾಮೀನು ರದ್ದುಗೊಳ್ಳಲಿದೆ ಎಂದು ಎಚ್ಚರಿಕೆ ಕೂಡ ನೀಡಿತ್ತು.

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿರುವ ಜಯಾ ಪರ ವಕೀಲರು ಈಗಾಗಲೇ ಕರ್ನಾಟಕ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಸ್ತುತ ಸುಪ್ರೀಂಕೋರ್ಟ್‌ನ ಆದೇಶದಂತೆ ವಿಶೇಷ ಪೀಠ ಸ್ಥಾಪಿಸಿ, ಅಲ್ಲಿ ಅರ್ಜಿಯ ವಿಚಾರಣೆ ನಡೆಯಬೇಕಿದೆ. ಅಲ್ಲದೆ ವಿಚಾರಣೆಯನ್ನು ಕೇವಲ ಮೂರು ತಿಂಗಳೊಳಗೆ ಮುಕ್ತಾಯಗೊಳಿಸಬೇಕಿದೆ.

SCROLL FOR NEXT