ನವದೆಹಲಿ: ಅಸ್ಸಾಂ ಮೂಲದ ಮಹಿಳೆ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ದೆಹಲಿಯ ಮುಂಡ್ಕಾ ಪ್ರದೇಶದಲ್ಲಿ 30 ವರ್ಷ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅಸ್ಸಾಂ ಮೂಲದ ಮಹಿಳೆ ದೆಹಲಿಯ ಮುಂಡ್ಕಾ ಪ್ರದೇಶದಲ್ಲಿ ವಾಸವಾಗಿದ್ದರು. ಇತ್ತೀಚೆಗಷ್ಟೇ ಮಹಿಳೆಯ ಪತಿ ನಿಧನರಾಗಿದ್ದರು. ಅಲ್ಲಿನ ನೆರೆಯವರಾಗಿದ್ದ ಈ ನಾಲ್ವರು ದುಷ್ಕರ್ಮಿಗಳು ಆಕೆಯನ್ನು ಪ್ರತಿದಿನ ಚೇಡಿಸುತ್ತಿದ್ದರು ಎಂದು ತಿಳಿದು ಬಂದಿದೆ.
ನವೆಂಬರ್ 8 ರಂದು ಮನೆಗೆ ನುಗ್ಗಿದ ದುಷ್ಕರ್ಮಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಈ ವೇಳೆ ಆಕೆಯ ಚೀರಾಟವನ್ನು ಕೇಳಿಸಿಕೊಂಡ ಸ್ಥಳಿಯರು, ಪೊಲೀಸ್ ಠಾಣೆಗೆ ಕರೆ ಮಾಡಿ ಸುದ್ದಿ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.