ಎಲ್ ಕೆ ಆಡ್ವಾಣಿ (ಸಂಗ್ರಹ ಚಿತ್ರ) 
ದೇಶ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಉದ್ದೇಶಿಸಿ ಭಾಷಣ: ಶಾ ಮನವಿ ತಿರಸ್ಕರಿಸಿದ ಆಡ್ವಾಣಿ

ಬೆಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಹಿರಿಯ ಮುಖಂಡ ಎಲ್ ಕೆ ಆಡ್ವಾಣಿ ಅವರು ಭಾಷಣ ಮಾಡುವುದಿಲ್ಲ ಎಂದು ಮೂಲಗಳು ತಿಳಿಸಿವೆ...

ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಮಾತನಾಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಮಾಡಿದ ಮನವಿಯನ್ನು ಪಕ್ಷದ ಹಿರಿಯ ಮುಖಂಡ ಎಲ್ ಕೆ ಆಡ್ವಾಣಿ ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ಪಕ್ಷದ ಮೂಲಗಳ ಪ್ರಕಾರ,  ಮೂರು ಭಾರಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದ ಆಡ್ವಾಣಿ ಅವರು, ಈ ಭಾರಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಮಾತನಾಡಲು ನಿರಾಸಕ್ತಿ ತೋರಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭಗೊಳ್ಳುವ ಕೆಲ ವಾರಗಳ ಮುಂಚಿತವಾಗಿಯೇ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಾಮ್ ಲಾಲ್ ಅವರು ಅಡ್ವಾಣಿ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ರಾಮಲಾಲ್ ಅವರು ಅಡ್ವಾಣಿ ಅವರ ಭಾಷಣದ ಕುರಿತು ಯಾವುದೇ ನಿರ್ಧಿಷ್ಟ ಮಾಹಿತಿ ನೀಡಿರಲಿಲ್ಲ ಎನ್ನಲಾಗಿದೆ.

ಮತ್ತೊಂದು ಮೂಲಗಳ ಪ್ರಕಾರ ಬೆಂಗಳೂರಿನ ಅಶೋಕ ಹೊಟೆಲ್ ನಲ್ಲಿ ನಿನ್ನೆಯಿಂದ ಆರಂಭವಾಗಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡಿರುವ ಆಡ್ವಾಣಿ ಅವರು ಪಕ್ಷದ ಹಿರಿಯ ನಾಯಕರ ನಡವಳಿಕೆಯಿಂದ ಮುನಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿಯೇ ಇಂದಿನ ಸಭೆಯಲ್ಲಿ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡುವುದಿಲ್ಲ ಎಂದು ಹೇಳಲಾಗುತ್ತಿದೆ. ಇನ್ನು ಸ್ವತಃ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೇ ಅಡ್ವಾಣಿ ಅವರನ್ನು ಓಲೈಕೆ ಮಾಡುವ ಯತ್ನ ಮಾಡಿದ್ದು, ಅದು ಸಫಲವಾಗಿಲ್ಲ ಎಂದು ಹೇಳಲಾಗುತ್ತಿದೆ.



ಅಡ್ವಾಣಿ ಅವರ ಕೋಪಕ್ಕೆ ಹಲವು ಕಾರಣಗಳನ್ನು ನೀಡಲಾಗುತ್ತಿದ್ದು, ನಿನ್ನೆ ಬಸವನಗುಡಿಯ ನ್ಯಾಷನಲ್ ಕಾಲೇಜು ಆವರಣದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಅಡ್ವಾಣಿ ಅವರನ್ನು ಮೂಲೆಗುಂಪು ಮಾಡಲಾಗಿತ್ತು ಎಂಬ ವಾದ ಕೇಳಿಬಂದಿದೆ. ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಮುಖಂಡರಾದ ಎಲ್ ಕೆ ಆಡ್ವಾಣಿ ಅವರಿಗೆ ಬೇಕೆಂದೇ ಭಾಷಣಕ್ಕೆ ಅನುವು ಮಾಡಿಕೊಟ್ಟಿಲ್ಲ ಎಂಬ ಗಂಭೀರ ಆರೋಪ ಆಯೋಜಕರ ವಿರುದ್ಧ ಕೇಳಿಬಂದಿದ್ದು, ಇದೇ ಕಾರಣಕ್ಕಾಗಿ ಅಡ್ವಾಣಿ ಅವರು ಪಕ್ಷದ ಹಿರಿಯ ಮುಖಂಡರ ವಿರುದ್ಧ ಮುನಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಕಾರ್ಯಕ್ರಮಕ್ಕೆ ಹಲವು ಪ್ರಮುಖ ಮುಖಂಡರು ಆಗಮಿಸಿದ್ದರೂ ವೇದಿಕೆಯಲ್ಲಿ ಕೇವಲ ನಾಲ್ಕು ಸ್ಥಾನಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು.

ವೇದಿಕೆಗೆ ಆಗಮಿಸಿದ ಆಡ್ವಾಣಿ ಅವರು ಮೊದಲು ಎದುರುಗೊಂಡ ಮೋದಿ ಪಕ್ಕದ ಆಸನದಲ್ಲಿ ಕುಳಿತುಕೊಳ್ಳಲು ಮುಂದಾದರು. ಆದರೆ ಅಷ್ಟರಲ್ಲಿ ನರೇಂದ್ರ ಮೋದಿ ಅವರೇ ಕೈ ಮುಂದೆ ಮಾಡಿ, ಅಮಿತ್ ಷಾ ಪಕ್ಕದಲ್ಲಿರುವ ಕೊನೆಯ ಆಸನದಲ್ಲಿ ಕುಳಿತುಕೊಳ್ಳುವಂತೆ ಕೈಯಲ್ಲೇ ಸೂಚನೆ ನೀಡಿದರು ಎಂದು ಹೇಳಲಾಗುತ್ತಿದೆ. ಈ ಘಟನೆಯಿಂದ ಕೆಲಕ್ಷಣ ಗೊಂದಲಕ್ಕೊಳಗಾದ ಆಡ್ವಾಣಿ ಅವರು ಮೌನವಾಗಿಯೇ ವೇದಿಕೆ ಹಿಂಬದಿಯಿಂದ ಸಾಗಿ ಕೊನೆಯ ಆಸನದಲ್ಲಿ ಕುಳಿತರು. ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಕಪಕ್ಕದ ಸ್ಥಾನಗಳನ್ನು ಅಲಂಕರಿಸಿ, ಕೊನೆಯ ಸ್ಥಾನದಲ್ಲಿ ಕೇಂದ್ರ ಗೃಹ ಸಚಿವರಾದ ರಾಜನಾಥ್ ಸಿಂಗ್ ಅವರು ಅಲಂಕರಿಸಿದರು. ಇದೂ ಕೂಡ ಆಡ್ವಾಣಿ ಅವರ ಸಿಟ್ಟಿಗೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.

ಒಟ್ಟಾರೆ 3 ಭಾರಿ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರುವ ಎಲ್ ಕೆ ಆಡ್ವಾಣಿ ಅವರು 2ನೇ ಬಾರಿಗೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿನ ಭಾಷಣದಿಂದ ಹಿಂದೆ ಸರಿದಿದ್ದಾರೆ. ಈ ಹಿಂದೆ ಅಂದರೆ ಲೋಕಸಭಾ ಚುನಾವಣೆಗೂ ಮುನ್ನ ಗೋವಾದಲ್ಲಿ ನಡೆದಿದ್ದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆ ಮಾಡುವಾಗಲೂ ಕೂಡ ಅಡ್ವಾಣಿ ಅವರು ಭಾಷಣ ಮಾಡಿರಲಿಲ್ಲ. ಆ ಮೂಲಕ ಪಕ್ಷದ ನಿರ್ಧಾರವನ್ನು ತಮ್ಮ ಸಿಟ್ಟಿನ ಮೂಲಕ ಬಹಿರಂಗವಾಗಿಯೇ ಹೊರಹಾಕಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT