ನವದೆಹಲಿ: ಜಂತರ್ ಮಂಥರ್‌ನಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್ ಬಂಧನವನ್ನು ದೆಹಲಿ ಜಂಟಿ ಪೊಲೀಸ್ ಆಯುಕ್ತ ಎಂ.ಕೆ.ಮೀನಾ ಅವರು ಮಂಗಳವಾರ ಸಮರ್ಥಿಸಿಕೊಂಡಿದ್ದಾರೆ.
ಕಾನೂನು ಪ್ರಕಾರ ನಾವು ಯೋಗೇಂದ್ರ ಯಾದವ್ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ ಎಂದು ಮೀನಾ ಹೇಳಿದ್ದಾರೆ.
ಆಗಸ್ಟ್ 10ರಂದು ಮಾತ್ರ ಪ್ರತಿಭಟನೆಗೆ ಅನುಮತಿ ನೀಡಲಾಗಿತ್ತು. ಬಳಿಕ ಅವರು ಆ.14ರವರೆಗೆ ವಿಸ್ತರಿಸುವಂತೆ ಮನವಿ ಮಾಡಿದ್ದರು. ಆದರೆ ಡಿಸಿಪಿ ಅದನ್ನು ತಿರಸ್ಕರಿಸಿದ್ದರು. ಅಲ್ಲದೆ ಪ್ರತಿಭಟನೆ ನಿಲ್ಲಿಸುವಂತೆ ಅವರಿಗೆ ಸೂಚಿಸಲಾಗಿತ್ತು. ಆದರೂ ಪ್ರತಿಭಟನೆ ಮುಂದುವರೆಸಿದ್ದರಿಂದ ಅವರನ್ನು ವಶಕ್ಕೆ ಪಡೆಯಲಾಯಿತು ಎಂದು ಮೀನಾ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ನೀಡಿದ ವರದಿಯ ಆಧಾರದ ಮೇಲೆ ನಾವು ಯೋಗೇಂದ್ರ ಯಾದವ್ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡಿದ್ದೇವೆ. ಎಲ್ಲವೂ ಕಾನೂನು ಪ್ರಕಾರವೇ ಮಾಡಲಾಗಿದೆ. ಯಾವುದೇ ಕಾನೂನು ಬಾಹಿರ ಕ್ರಮ ತೆಗೆದುಕೊಂಡಿಲ್ಲ ಎಂದು ಜಂಟಿ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.
ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಯೋಗೇಂದ್ರ ಯಾದವ್ ಅವರನ್ನು ನಿನ್ನೆ ತಡ ರಾತ್ರಿ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಈ ಮಧ್ಯೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಪೊಲೀಸರ ಕ್ರಮವನ್ನು ಖಂಡಿಸಿ ಟ್ವೀಟ್ ಮಾಡಿದ್ದಾರೆ.