ನವದೆಹಲಿ: 1 ತಿಂಗಳ ಕಾಲ ನಡೆದ ಸಂಸತ್ತಿನ ಮುಂಗಾರು ಅಧಿವೇಶನ ವ್ಯರ್ಥವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಇಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಕಾಂಗ್ರೆಸ್ ವಕ್ತಾರ ಗುಲಾಂ ನಬಿ ಆಜಾದ್ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯಯಲ್ಲಿ ಮಾತನಾಡಿದ ಅವರು, ಭಾರತ ದೇಶ ಇತಿಹಾಸದಲ್ಲೇ ಇಂಥ ಅಸಮರ್ಥ ಹಾಗೂ ಬಲಹೀನ ಸರ್ಕಾರವನ್ನು ನೋಡಿರಲಿಲ್ಲ, ನರೇಂದ್ರಮೋದಿ ಸರ್ಕಾರ ದೇಶದ ಜನತೆಯ ವಿಶ್ವಾಸವನ್ನು ಕಳೆದುಕೊಳ್ಳುತ್ತಿದೆ ಎಂದು ದೂರಿದರು.
ರಾಜ್ಯ ಸಭೆ ಮತ್ತು ಲೋಕ ಸಭೆಗಳಲ್ಲಿ ಸಮನ್ವಯತೆ ಕಾಯ್ದುಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಎನ್ ಡಿಎ ಸರ್ಕಾರ ಪ್ರತಿಪಕ್ಷಗಳ ವಿಶ್ವಾಸ ಗಳಿಸಿಕೊಳ್ಳುವಲ್ಲಿ ಎಡವಿದೆ. ಸಂಸತ್ ಭವನದ ಹೊರಗೆ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ತಲೆಕೆಡಿಸಿಕೊಳ್ಳಲಿಲ್ಲ ಎಂದು ಆಪಾದಿಸಿದರು.