ದೆಹಲಿ: ಭಾರತ ಮೀಸಲಾತಿ ವ್ಯವಸ್ಥೆಯನ್ನು ಸಂಪೂರ್ಣವಾಗಿ ಅಂತ್ಯಗೊಳಿಸುವ ಸ್ಥಿತಿಯಲ್ಲಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಪಟೇಲ್ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿರುವುದರ ಬಗ್ಗೆ ಖಾಸಗಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿರುವ ಅರುಣ್ ಜೇಟ್ಲಿ, ಭಾರತದ ಸದ್ಯದ ಸ್ಥಿತಿಯಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಂಪೂರ್ಣವಾಗಿ ತೆಗೆದುಹಾಕಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಪಟೇಲ್ ಸಮುದಾಯಕ್ಕೆ ಮೀಸಲಾತಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವುದಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದರು, ಅಲ್ಲದೇ ಮೀಸಲಾತಿ ವ್ಯವಸ್ಥೆಯನ್ನೇ ತೆಗೆದುಹಾಕಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಮಹಾರಾಷ್ಟ್ರದ ಹಿಂದುಳಿದ ವರ್ಗಗಳು ಪಟೇಲ್ ಹಾಗೂ ಮರಾಠ ಸಮುದಾಯದವರಿಗೆ ಮೀಸಲಾತಿ ನೀಡುವುದನ್ನು ವಿರೋಧಿಸಿದ್ದವು.
ಪಟೇಲ್ ಸಮುದಾಯದ ಪ್ರತಿಭಟನೆ ಗುಜರಾತ್ ಹಾಗೂ ಕೇಂದ್ರ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಮೀಸಲಾತಿ ಘೋಷಣೆ ಮಾಡದೇ ಇದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹಾರ್ದಿಕ್ ಪಟೇಲ್ ಎಚ್ಚರಿಕೆ ನೀಡಿದ್ದಾರೆ.