ದೇಶ

ರಾಜ್ಯಗಳು ಒಪ್ಪಿದರೆ ಮಾತ್ರ ಪೆಟ್ರೋಲಿಯಂ ಉತ್ಪನ್ನಗಳು ಜಿಎಸ್ ಟಿ ವ್ಯಾಪ್ತಿಗೆ: ಸಚಿವ ಧರ್ಮೇಂದ್ರ ಪ್ರಧಾನ್

Srinivas Rao BV

ನವದೆಹಲಿ: ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಕಾಯ್ದೆ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಉದ್ದೇಶಿಸಿದೆ. ಆದರೆ ಈ ಬಗ್ಗೆ ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ಕಾಯ್ದೆ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಆದರೆ ರಾಜ್ಯ ಸರ್ಕಾರಗಳ ಅಭಿಪ್ರಾಯ ಪಡೆದ ನಂತರವೇ ಈ ಬಗ್ಗೆ ನಿರ್ಧರಿಸುತ್ತೇವೆ ಎಂದು ಲೋಕಸಭೆಗೆ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಶೇ.52 ರಷ್ಟು ತೆರಿಗೆ ವಿಧಿಸುತ್ತವೆ. ತೈಲೋತ್ಪನ್ನಗಳ ಮೇಲೆ ಕೇಂದ್ರ ಸರ್ಕಾರ ಶೇ.32 ರಷ್ಟು ತೆರಿಗೆ ವಿಧಿಸಿದರೆ ರಾಜ್ಯ ಸರ್ಕಾರಗಳು ಶೇ.20 ರಷ್ಟು ತೆರಿಗೆ ವಿಧಿಸುತ್ತವೆ. ಅದರಿಂದ ಬರುವ ಲಾಭವನ್ನು ಅಭಿವೃದ್ಧಿ ಯೋಜನೆಗಳಿಗೆ ಬಳಕೆಯಾಗುತ್ತವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಹ್ಮಣ್ಯನ್ ನೇತೃತ್ವದ ಜಿಎಸ್ ಟಿ ಮಸೂದೆ ಸಮಿತಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ಕಾಯ್ದೆ ವ್ಯಾಪ್ತಿಗೆ ಸೇರಿಸಬೇಕು ಎಂದು ಸಲಹೆ ನೀಡಿತ್ತು.

SCROLL FOR NEXT