ನವದೆಹಲಿ: ದೇಶಾದ್ಯಂತ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೆ ತರುವಂತೆ ಸಂಸತ್ ಗೆ ಸೂಚನೆ ನೀಡಬೆಕೆಂದು ಮನವಿ ಮಾಡಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಮುಸ್ಲಿಂ ಮಹಿಳೆಯರು ಎದುರಿಸುತ್ತಿರುವ ತಾರತಮ್ಯಕ್ಕೆ ಅಂತ್ಯ ಹಾಡಲು ದೇಶಾದ್ಯಂತ ಸಮಾನ ನಾಗರಿಕ ಸಂಹಿತೆ ಜಾರಿಗೆ ತರಬೇಕು, ಕಾನೂನಿನ ಮೂಲಕ ಸಮಾಜ ನಾಗರಿಕ ಸಂಹಿತೆ ಜಾರಿಗೊಳಿಸುವಂತೆ ಸಂಸತ್ ಗೆ ಸೂಚನೆ ನೀಡಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಲಾಗಿತ್ತು.
ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವುದರ ಬಗ್ಗೆ ಸಂಸತ್ ನಿರ್ಧಾರ ಕೈಗೊಳ್ಳಬೆಕೆ ಹೊರತು ಈ ಬಗ್ಗೆ ಸರ್ಕಾರಕ್ಕೆ ನಿರ್ದೇಶನ ನೀಡುವುದು ತನ್ನ ವ್ಯಾಪ್ತಿಗೆ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಟಿ.ಎಸ್ ಠಾಕೂರ್ ನೇತೃತ್ವದ ಪೀಠ ಹೇಳಿದೆ.
ಸಮಾನ ನಾಗರಿಕ ಸಂಹಿತೆ ಜಾರಿಗೊಳ್ಳದೇ ಇರುವುದರಿಂದ ತಾರತಮ್ಯ ಎದುರಿಸುತ್ತಿರುವವರು ಈ ವರೆಗೂ ಏಕೆ ಪರಿಹಾರ ಕೋರಿ ಕೋರ್ಟ್ ಮೊರೆ ಬಂದಿಲ್ಲ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ದೇಶಾದ್ಯಂತ ಶೀಘ್ರವೇ ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸುವಂತೆ ಅಡ್ವೊಕೇಟ್ ಅಶ್ವಿನಿ ಕುಮಾರ್ ಉಪಾಧ್ಯಾಯ ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು.