ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಸಮಾಪ್ತಿಗೊಳಿಸುವಂತೆ ಶಿಫಾರಸು ಮಾಡಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಯನ್ನು ವಿಶಿಷ್ಟ ಗುರುತಿನ ಸಂಖ್ಯೆ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಲಾಗಿದೆ.
ಹಿಮಾಂಶು ಕುಮಾರ್ ಲಾಲ್ ಅವರು ಇನ್ನು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯಡಿ ಬರುವ ಭಾರತೀಯ ವಿಶಿಷ್ಟ ಗುರುತಿನ ಸಂಖ್ಯೆ ಪ್ರಾಧಿಕಾರದ ಉಪಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಬೇಕಾಗಿದೆ. ಒಡಿಶಾ ಕೇಡರ್‍ನ 2003ರ ಐಪಿಎಸ್ ಅಧಿಕಾರಿಯಾಗಿರುವ ಲಾಲ್ ಅವರು ಜಾರಿ ನಿರ್ದೇಶನಾಲಯ(ಇಡಿ)ದಲ್ಲಿ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕಂದಾಯ ಇಲಾಖೆಗೆ ಸಲ್ಲಿಸಿದ್ದ ವರದಿಯಲ್ಲಿ ಇವರು ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಸಮಾಪ್ತಿಗೊಳಿಸುವಂತೆ ಶಿಫಾರಸು ಮಾಡಿದ್ದರು. ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್‍ಗಾಂಧಿ ಅವರು ದೃಢವಾಗಿ ಹೇಳುವಂತಹ ತಪ್ಪುಗಳನ್ನು ಮಾಡಿರುವುದು ಕಂಡುಬರುತ್ತಿಲ್ಲ ಎಂದೂ ಹೇಳಿದ್ದರು.
ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಈ ವರದಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದರು. ಜತೆಗೆ, ಇಡಿ ನಿರ್ದೇಶಕರಾಗಿ ಹೆಚ್ಚುವರಿ ಹೊಣೆ ಹೊತ್ತಿರುವ ರಾಜನ್ ಎಸ್ ಕಟೋಚ್ ಅವರ ಬದಲಿಗೆ ಪೂರ್ಣಕಾಲಿಕ ನಿರ್ದೇಶಕರನ್ನು ನೇಮಕ ಮಾಡುವಂತೆಯೂ ಕೋರಿದ್ದರು.