ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನಾಳೆ ವಿಚಾರಣೆಗೆ ಹಾಜರಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಕೋರ್ಟ್ ಮೂಲಗಳ ಪ್ರಕಾರ, ವಿಶೇಷ ಭದ್ರತಾ ಪಡೆ(ಎಸ್‌ಪಿಜಿ)ಯ ಹಿರಿಯ ಅಧಿಕಾರಿಗಳು, ದೆಹಲಿ ಪೊಲೀಸರು ಹಾಗೂ ಗುಪ್ತಚರ ಇಲಾಖೆ ಅಧಿಕಾರಿಗಳು ಕೋರ್ಟ್ ಆವರಣದಲ್ಲಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದ್ದು, ಆವರಣದಲ್ಲಿ ಹೆಚ್ಚುವರಿಯಾಗಿ 16 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಹೆಚ್ಚಿನ ಭದ್ರತೆಗೆ ಸಂಬಂಧಿಸಿದಂತೆ ರಕ್ಷಣಾ ಸಿಬ್ಬಂದಿ ಪಟಿಯಾಲ ಹೌಸ್ ಕೋರ್ಟ್‌ನ ಜಿಲ್ಲಾ ನ್ಯಾಯಾಧೀಶರೊಂದಿಗೆ ಚರ್ಚಿಸಿದ್ದು, ನಾಳೆ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸೇರಿದಂತೆ ಐವರಿಗೆ ಸಮನ್ಸ್ ನೀಡಿರುವ ಕೋರ್ಟ್ ಡಿಸೆಂಬರ್ 19 ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ.