ನವದೆಹಲಿ: ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎಂ) ಹಗರಣ ತನಿಖೆ ಈಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಡುವೆ ಹೊಸ ವಿವಾದಕ್ಕೆ ಕಾರಣವಾಗಿದೆ.
ಡಿಡಿಸಿಎಂ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಸರ್ಕಾರ ರಚಿಸಿರುವ ತನಿಖಾ ಆಯೋಗದ ಕಾನೂನು ಮಾನ್ಯತೆಯನ್ನು ಪ್ರಶ್ನಿಸಿರುವ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಮನವಿ ಮಾಡಿದ್ದಾರೆ.
ಈ ಸಂಬಂಧ ಗೃಹ ಸಚಿವಾಲಯಕ್ಕೆ ಪತ್ರ ಬರೆದಿರುವ ಜಂಗ್, ತನಿಖಾ ಆಯೋಗ ಕಾಯ್ದೆ 1952 ಅನ್ವಯ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮಾತ್ರ ತನಿಖಾ ಆಯೋಗವನ್ನು ರಚಿಸಬಹುದಾಗಿದೆ. ಆದರೆ ದೆಹಲಿ ಕೇಂದ್ರಾಡಳಿತ ಪ್ರದೇಶವಾಗಿದ್ದು, ಕೇಂದ್ರದ ಸೂಚನೆಯಂತೆ ಲೆಫ್ಟಿನೆಂಟ್ ಗವರ್ನರ್ ಮೂಲಕ ತನಿಖಾ ಆಯೋಗಕ್ಕೆ ಆದೇಶಿಸಬಹುದಾಗಿದೆ ಎಂದು ವಿವರಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್, ಈ ವಿಷಯ ಲೆಫ್ಟಿನೆಂಟ್ ಗವರ್ನರ್ ವ್ಯಾಪ್ತಿಗೆ ಬರುವುದಿಲ್ಲ ಮತ್ತು ತನಿಖಾ ಆಯೋಗ ಕಾನೂನಾತ್ಮಕವಾಗಿಯೇ ಇದೆ ಎಂದಿದ್ದಾರೆ. ಅಲ್ಲದೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಲೆಫ್ಟಿನೆಂಟ್ ಗವರ್ನರ್ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ನಿಲ್ಲಿಸಿ, ತನಿಖೆಗೆ ಸಹಕರಿಸಬೇಕು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics