ದೇಶ

ದೇಶಪಾಂಡೆ ಪ್ರಕರಣ: ವಿವರಣೆ ಕೇಳಿದ ಸೋನಿಯಾ ಗಾಂಧಿ

Mainashree

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ  ದಾಖಲಾದ ಎಫ್‌ಐಆರ್  ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಮಂಗಳವಾರ ವಿವರಣೆ ಕೇಳಿದ್ದಾರೆ.

ಐಟಿ ಕಾರಿಡಾರ್ ಯೋಜನೆಗೆ ಸರ್ಕಾರಿ ಭೂಮಿ ಪರಭಾರೆ ಮಾಡಿದ ವಿಷಯ ಕುರಿತು ಆರ್.ವಿ.ದೇಶಪಾಂಡೆ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಎಫ್ ಐಆರ್ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮಾಡಿ  ವಿವರಣೆ ನೀಡುವಂತೆ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಐಟಿ ಕಾರಿಡಾರ್ ನಿರ್ಮಾಣಕ್ಕಾಗಿ ನಡೆಸಲಾಗಿದ್ದ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ದೇಶಪಾಂಡೆ  70 ಎಕರೆ ಡಿನೋಟಿಫಿಕೇಷನ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.  ಈ ಆರೋಪಕ್ಕೆ ಸಂಬಂಧಿಸಿದ ಮಾಹಿತಿಗಳ ವಿವರಗಳನ್ನು ಸೋನಿಯಾ ಗಾಂಧಿ ಇಂದು ಮುಖ್ಯಮಂತ್ರಿಗಳಿಂದ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಹಗರಣದ ಸಂಪೂರ್ಣ ಮಾಹಿತಿ ಪಡೆದಿರುವ ಅವರು, ಇದರಿಂದ ಸರ್ಕಾರಕ್ಕೆ ಸಮಸ್ಯೆ ಎದುರಾಗಬಹುದೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಿ ಮುಂದಿನ ಕ್ರಮದ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ವರ್ತೂರು ಹೋಬಳಿಗೆ ಸೇರಿರುವ ದೇವರಬಿಸನಹಳ್ಳಿ ಬಳಿಯ ಮಾಹಿತಿ ತಂತ್ರಜ್ಞಾನ ಕಾರಿಡಾರ್‌ಗೆ ಸರ್ಕಾರ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಕಾನೂನುಬಾಹಿರವಾಗಿ ಡಿನೋಟಿಫಿಕೇಷನ್ ಮಾಡಲಾಗಿದೆ ಎಂಬ ಆರೋಪದ ಮೇಲೆ ಆರ್.ವಿ.ದೇಶಪಾಂಡೆ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಎಫ್‌ಐಆರ್ ದಾಖಲಾಗಿತ್ತು.  

ವಾಸುದೇವ ರೆಡ್ಡಿ ಎಂಬುವರು ನೀಡಿದ್ದ ಖಾಸಗಿ ದೂರು ಆಧರಿಸಿ ವಿಚಾರಣೆ ನಡೆಸಿದ್ದ ಲೋಕಾಯುಕ್ತ ವಿಶೇಷ ನ್ಯಾಯಾಲಯ, ತನಿಖೆಗೆ ಆದೇಶಿಸಿತ್ತು.

SCROLL FOR NEXT