ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಪರೋಕ್ಷ ಯುದ್ಧಕ್ಕೆ ಪಾಕಿಸ್ತಾನ ಬೆಂಬಲ ನೀಡುತ್ತಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ದಲ್ಬಿರ್ ಸಿಂಗ್ ಸುಹಾಗ್ ಅವರು ಮಂಗಳವಾರ ಆರೋಪಿಸಿದ್ದಾರೆ.
ಪಾಕಿಸ್ತಾನ ಪದೇಪದೆ ಕದನ ವಿರಾಮ ಉಲ್ಲಂಘಿಸುತ್ತಿರುವ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಸೇನಾ ಮುಖ್ಯಸ್ಥರು, ಪಾಕಿಸ್ತಾನ ಸ್ವತಃ ಉಗ್ರರ ದಾಳಿಯಿಂದ ನರಳುತ್ತಿದ್ದರೂ ಜಮ್ಮು ಮತ್ತು ಕಾಶ್ಮೀರದಲ್ಲಿ ಪರೋಕ್ಷ ಯುದ್ಧಕ್ಕೆ ಉಗ್ರರಿಗೆ ಬೆಂಬಲ ನೀಡುತ್ತಿದೆ ಎಂದು ಹೇಳಿದ್ದಾರೆ.
ಭಾರತೀಯ ಸೇನೆ 2014ರಲ್ಲಿ 110 ಉಗ್ರರನ್ನು ಮಟ್ಟ ಹಾಕಿದೆ. ಆದರೆ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಚಟುವಟಿಕೆಗಳು ಹೆಚ್ಚುತ್ತಿದ್ದು, ಇದರಿಂದ ಭಾರತ ಅತಿ ಹೆಚ್ಚು ಅಪಾಯ ಮತ್ತು ಸವಾಲುಗಳನ್ನು ಎದುರಿಸುತ್ತಿದೆ ಎಂದು ಜನರಲ್ ಸುಹಾಗ್ ತಿಳಿಸಿದ್ದಾರೆ.
ಇದೇ ವೇಳೆ, ಗಡಿಯಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿರುವ ಸೈನಿಕರು ಯಾವುದೇ ಕ್ರಮ ತೆಗೆದುಕೊಳ್ಳಲು ಮುಕ್ತ ಅವಕಾಶ ನೀಡಲಾಗಿದೆ ಎಂದು ಸುಹಾಗ್ ತಿಳಿಸಿದರು.