ನವದೆಹಲಿ: ಬಿಹಾರ ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರೀ ಮುಖಭಂಗ ಅನುಭವಿಸಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್, ಜುಲೈ 13ರಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಏರ್ಪಡಿಸಿರುವ ಇಫ್ತಾರ್ ಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಲಾಗಿದೆ.
ಜುಲೈ 13 ರಂದು ಕೇಂದ್ರ ಸರ್ಕಾರ ಜಾತಿ ಗಣತಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಆರ್ ಜೆ ಡಿ ಪಕ್ಷ ರಾಜಭವನದ ವರೆಗೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದೆ. ಜೊತೆಗೆ ಜುಲೈ 13 ರಂದೇ ಲಾಲೂ ಪ್ರಸಾದ್ ಯಾದವ್ ಕೂಡ ಇಫ್ತಾರ್ ಕೂಟ ಏರ್ಪಡಿಸಿರುವುದರಿಂದ ಸೋನಿಯಾ ಗಾಂಧಿ ಆಯೋಜಿಸಿರುವ ಇಫ್ತಾರ್ ಕೂಟದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬಿಹಾರ ವಿಧಾನಪರಿಷತ್ ಚುನಾವಣೆಯಲ್ಲಿ ಹೀನಾಯ ಸೋಲು ಅನುಭಿಸಿರುವ ಆರ್ ಜೆಡಿ ಮುಂಬರುವ ವಿಧಾನ ಸಭೆ ಚುನಾವಣೆಯಲ್ಲೂ ಪರಾಭವ ಕಾಣುವ ಭೀತಿಯಿಲ್ಲಿದೆ. ಇನ್ನು ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಕೂಡ ಇಫ್ತಾರ್ ಕೂಟದಿಂದ ದೂರ ಉಳಿದಿದ್ದಾರೆ. ಉಳಿದಂತೆ ಎಲ್ಲಾ ವಿರೋಧ ಪಕ್ಷಗಳು ಸೋನಿಯಾಗಾಂಧಿ ಇಫ್ತಾರ್ ಕೂಟದಲ್ಲಿ ಭಾಗವಹಿಸಲಿದ್ದಾರೆ.