ನವದೆಹಲಿ: ಪಂಜಾಬ್ ನ ಗುರ್ದಾಸಪುರ್ ಜಿಲ್ಲೆಯಲ್ಲಿ ನಡೆದ ಉಗ್ರಗಾಮಿ ದಾಳಿ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನ ಗಡಿ ಭಾಗದಲ್ಲಿ ಭದ್ರತಾ ಪಡೆ ಕಾವಲನ್ನು ಹೆಚ್ಚಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ದಿನನಗರ್ ಪಟ್ಟಣದಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿಯಲ್ಲಿ ಕನಿಷ್ಟ ಐವರು ಸಾವನ್ನಪ್ಪಿ, ಹತ್ತು ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತ-ಪಾಕ್ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಗೃಹ ಸಚಿವಾಲಯ ಅಲ್ಲಿನ ಪರಿಸ್ಥಿತಿ ಬಗ್ಗೆ ಅವಲೋಕಿಸುತ್ತಿದ್ದು, ಸಹಜ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ. ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಗುರ್ದಾಸಪುರದ ಪರಿಸ್ಥಿತಿ ಬಗ್ಗೆ ವಿವರಿಸಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.
ರಾಜಧಾನಿಯಲ್ಲೂ ಕಟ್ಟೆಚ್ಚರ: ಪಂಜಾಬ್ ನಲ್ಲಿ ಉಗ್ರಗಾಮಿಗಳ ದಾಳಿ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕಟ್ಟೆಚ್ಚರ ಘೋಷಿಸಲಾಗಿದೆ. ರೈಲ್ವೆ ನಿಲ್ದಾಣ, ಶಾಪಿಂಗ್ ಮಾಲ್, ಜನಸಂದಣಿ ಇರುವ ಮಾರುಕಟ್ಟೆ ಮೊದಲಾದ ಪ್ರದೇಶಗಳಲ್ಲಿ ಪೊಲೀಸ್ ಪಡೆ ನಿಯೋಜಿಸಲಾಗಿದ್ದು, ತೀವ್ರ ಕಟ್ಟೆಚ್ಚರ ಘೋಷಿಸಲಾಗಿದೆ.