ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು ಬುಧವಾರ ದೆಹಲಿ ಗವರ್ನರ್ ನಜೀಬ್ ಜಂಗ್ ಅವರನ್ನು ಭೇಟಿ ಮಾಡಲಿದ್ದಾರೆ.
ದೆಹಲಿ ಕಾನೂನು ಸಚಿವ ಸ್ಥಾನಕ್ಕೆ ಜಿತೇಂದ್ರ ಸಿಂಗ್ ತೋಮರ್ ಅವರು ರಾಜಿನಾಮೆ ನೀಡಿದ ಬೆನ್ನಲ್ಲೇ ಸಿಎಂ ಕೇಜ್ರಿವಾಲ್ ಅವರು ಗವರ್ನರ್ ಅವರನ್ನು ಭೇಟಿ ಮಾಡುತ್ತಿದ್ದಾರೆ.
ಕಾನೂನು ಬಾಹಿರವಾಗಿ ಕಾನೂನು ಪದವಿ ಪಡೆದ ಆರೋಪದ ಹಿನ್ನೆಲೆಯಲ್ಲಿ ತೋಮರ್ ಅವರನ್ನು ನಿನ್ನೆ ದೆಹಲಿ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯನ್ನು ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.
ತೋಮರ್ ಅವರ ಬಂಧನದಿಂದ ಆಘಾತಗೊಂಡಿರುವ ಆಪ್, ನರೇಂದ್ರ ಮೋದಿ ಸರ್ಕಾರ ರಾಜ್ಯದಲ್ಲಿ ತುರ್ತು ಪರಿಸ್ಥಿತಿಯಂತಹ ಸ್ಥಿತಿಯನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದೆ.