ನವದೆಹಲಿ: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಆರೋಪಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷ ತನ್ನ ನಾಯಕ ಕುಮಾರ್ ವಿಶ್ವಾಸ್ ಬೆಂಬಲಕ್ಕೆ ನಿಂತಿದೆ.
ಕುಮಾರ್ ವಿಶ್ವಾಸ ಅವರನ್ನು ಸಮರ್ಥಿಸಿಕೊಂಡಿರುವ ಆಪ್ ನಾಯಕ ಸಂಜಯ್ ಸಿಂಗ್, ಮಾಧ್ಯಮಗಳು ವಿಷಯವನ್ನು ತಿರುಚುತ್ತಿವೆ ಎಂದು ಆರೋಪಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಂಜಯ್ ಸಿಂಗ್, ಆಮ್ ಆದ್ಮಿ ಪಕ್ಷದ ಕಾರ್ಯಕರ್ತೆ ಮೊದಲು, ಸಾಮಾಜಿಕ ಜಾಲತಾಣದಲ್ಲಿ ಕೆಲವರು ನನ್ನ ಬಗ್ಗೆ ಆಧಾರ ರಹಿತ ಆರೋಪಗಳನ್ನು ಮಾಡುವ ಮೂಲಕ ನನ್ನ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿ ಮಾರ್ಚ್ 31ರಂದು ದೆಹಲಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಅಲ್ಲದೆ ದೂರಿನಲ್ಲಿ ನಾಲ್ವರು ಆರೋಪಿಗಳ ಹೆಸರನ್ನು ಹೇಳಿದ್ದಾರೆ. ಆದರೆ ಪೊಲೀಸರು ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಳ್ಳದಿದ್ದಾಗ, ಅವರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ ಎಂದರು.
ಇನ್ನು ತಮ್ಮ ವಿರುದ್ಧದ ಆರೋಪವನ್ನು ತಳ್ಳಿಹಾಕಿರುವ ಕುಮಾರ್ ವಿಶ್ವಾಸ್ ಅವರು, ಬಿಜೆಪಿ ಹಾಗೂ ಕಾಂಗ್ರೆಸ್ ನನ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ರೂಪಿಸಿವೆ ಎಂದು ಆರೋಪಿಸಿದ್ದಾರೆ. ಅಲ್ಲದೆ ತನ್ನ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ವಕ್ತಾರ ಸೇರಿದಂತೆ ನಾಲ್ವರ ವಿರುದ್ಧ ಮಹಿಳೆ ನೀಡಿದ್ದ ದೂರಿನ ಬಗ್ಗೆ ದೆಹಲಿ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದ್ದರು.