ಝಬುವಾ: ಮಧ್ಯಪ್ರದೇಶದ ಝಬುವಾ ಜಿಲ್ಲೆಯ ಟೀ ಅಂಗಡಿಯೊಂದರಲ್ಲಿ ಶನಿವಾರ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿದೆ.
ಹೋಟೆಲ್‌ನಲ್ಲಿದ್ದ ನಾಲ್ಕು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದು ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ ಬೆಂಕಿ ಹತ್ತಿರದಲ್ಲಿದ್ದ ಇನ್ನೊಂದು ಕಟ್ಟಡಕ್ಕೆ ವ್ಯಾಪಿಸಿದ ಪರಿಣಾಮ ಅಲ್ಲೂ ಒಂದು ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ೪೦ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೊದಲ ಸ್ಫೋಟದ ನಂತರ ಎರಡು ಅಂತಸ್ತಿನ ಕಟ್ಟಡದಲ್ಲಿ ಮತ್ತೊಂದು ಸ್ಫೋಟ ಆಗಿದ್ದರಿಂದ ಕಟ್ಟಡ ಕುಸಿದುಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಝಬುವಾದಲ್ಲಿ ಈ ಸ್ಫೋಟಗಳು ಸಂಭವಿಸಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸುರೇಂದ್ರ ಸಿಂಗ್ ತಿಳಿಸಿದ್ದಾರೆ. ಅಗ್ನಿ ಶಾಮಕ ದಳ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.