ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯ ಎನ್‌ಡಿಎ ಸೀಟು ಹಂಚಿಕೆಗೆ ಸಂಬಂಧಿಸಿ ಉಂಟಾಗಿದ್ದ ಬಿಕ್ಕಟ್ಟು ಸೋಮವಾರ ಶಮನಗೊಂಡಿದ್ದು, ಮೈತ್ರಿಕೂಟದ ಪ್ರಮುಖ ಪಕ್ಷ ಬಿಜೆಪಿ 160 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.
ಈ ಸಂಬಂಧ ಇಂದು ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಬಿಹಾರ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರ ಹಿಂದುಸ್ಥಾನ್ ಅವಾಮ್ ಮೋರ್ಚಾಗೆ 20, ಎಲ್‌ಜೆಪಿಗೆ 40, ಆರ್‌ಎಲ್‌ಪಿ 23 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.
ಸಭೆಯ ಬಳಿಕ ಜಿತನ್ ರಾಮ್ ಮಾಂಝಿಯೊಂದಿಗೆ ಸುದ್ದಿಘೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಹಾರದ ಎಲ್ಲಾ ವಿಧಾಸಭಾ ಕ್ಷೇತ್ರಗಳಲ್ಲೂ ಬಿಜೆಪಿ ನೇತೃತ್ವದ ಎನ್‌ಡಿಎ ಸ್ಪರ್ಧಿಸಲಿದೆ ಎಂದರು.
ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅಮಿತ್ ಶಾ, ಭ್ರಷ್ಟ ನಿತಿಶ್ ಕುಮಾರ್ ಸರ್ಕಾರವನ್ನು ಬಿಹಾರ ಜನತೆ ತಿರಸ್ಕರಿಸಲಿದ್ದಾರೆ ಎಂದು ಹೇಳಿದರು.