ನವದೆಹಲಿ: ಇತ್ತೀಚಿಗೆ ತೀವ್ರ ವಿವಾದಗಳಿಂದ ಭಾರಿ ಸುದ್ದಿಯಾಗಿದ್ದ ದೆಹಲಿಯ ಜವಹಾರಲಾಲ್ ನೆಹರೂ ವಿಶ್ವವಿದ್ಯಾನಿಲಯ(ಜೆಎನ್‌ಯು) ಹಾಗೂ ಹೈದರಾಬಾದ್ ವಿಶ್ವವಿದ್ಯಾನಿಲಯಗಳು ಕೇಂದ್ರೀಯ ವಿಶ್ವವಿದ್ಯಾನಿಲಯಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿವೆ.
ನ್ಯಾಷನಲ್ ಇನ್‌ಸ್ಟಿಟ್ಯೂಷನಲ್ ರ್ಯಾಂಕಿಂಗ್ ಫ್ರೇಮ್‌ವರ್ಕ್ (ಎನ್‌ಐಆರ್‌ಎಫ್) ಸಂಸ್ಥೆ ನಡೆಸಿರುವ ಸಮೀಕ್ಷೆಯಿಂದ ಈ ಅಂಶ ತಿಳಿದುಬಂದಿದೆ.
ಎನ್‌ಐಆರ್‌ಎಫ್ ಸಂಸ್ಥೆಯು ದೇಶದ 3,500 ಶಿಕ್ಷಣ ಸಂಸ್ಥೆಗಳನ್ನು ಸಮೀಕ್ಷೆ ನಡೆಸಿ ಸಿದ್ಧಪಡಿಸಿರುವ ರ್ಯಾಂಕಿಂಗ್ ವರದಿಯನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಸೋಮವಾರ ಬಿಡುಗಡೆ ಮಾಡಿದರು.
ವಿಶ್ವವಿದ್ಯಾನಿಲಯಗಳ ವಿಭಾಗದಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಹಾಗೂ ಮುಂಬೈನ ಇನ್‌ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ (ಐಸಿಟಿ) ಅಗ್ರಸ್ಥಾನದಲ್ಲಿವೆ.
ವರದಿ ಬಿಡುಗಡೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇರಾನಿ, ‘ವಿಶ್ವವಿದ್ಯಾಲಯಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳ ರ್ಯಾಕಿಂಗ್ ವ್ಯವಸ್ಥೆಯಿಂದ ಯಾವ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಬೇಕೆಂಬ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದಂತಾಗುತ್ತದೆ. ಇನ್ನಷ್ಟು ವಿಭಾಗಗಳ ಶೈಕ್ಷಣಿಕ ಸಂಸ್ಥೆಗಳನ್ನು ಎನ್‌ಐಆರ್‌ಎಫ್ ಸಮೀಕ್ಷೆಗೆ ಒಳಪಡಿಸಲಾಗುವುದು’ ಎಂದರು.