ಜಮ್ಮು: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಯೋಧರು ಇಬ್ಬರು ಉಗ್ರರನ್ನು ಹತ್ಯೆ ಮಾಡಿರುವುದಾಗಿ ಗುರುವಾರ ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ನುಸುಳಿರುವುದಾಗಿ ಹೇಳಲಾಗುತ್ತಿತ್ತು. ಇದರಂತೆ ಯೋಧರು ಕಾರ್ಯಾಚರಣೆಗಿಳಿದಿದ್ದರು.
ಯೋಧರು ಕಾರ್ಯಾಚರಣೆ ನಡೆಸುತ್ತಿದ್ದಂತೆ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಇದರಂತೆ ಕಳೆದ ರಾತ್ರಿಯಿಂದ ಸುಧೀರ್ಘ ಕಾರ್ಯಾಚರಣೆ ನಡೆಸಿರುವ ಯೋಧರು ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆಂದು ತಿಳಿದುಬಂದಿದೆ.
ಹತ್ಯೆಯಾದ ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆಂದು ಹೇಳಲಾಗುತ್ತಿದ್ದು, ನಸೀರ್ ಅಹ್ಮದ್ ಪಂಡೀತ್, ವಾಸೀಮ್ ಮಾಲಾ ಎಂದು ಗುರ್ತಿಸಲಾಗಿದೆ. ಪ್ರಸ್ತುತ ಸ್ಥಳದಲ್ಲಿ ಮತ್ತಷ್ಟು ಉಗ್ರರಿರುವುದಾಗಿ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.