ದೇಶ

ಆಗಸ್ಟಾ ಹಗರಣದ ತನಿಖೆ ತಾರ್ಕಿಕ ಅಂತ್ಯ ಕಾಣಲಿದೆ: ರೂಡಿ

Lingaraj Badiger
ನವದೆಹಲಿ: ಬಹುಕೋಟಿ ಆಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣದ ತನಿಖೆ ಶೀಘ್ರ ತಾರ್ಕಿಕ ಅಂತ್ಯ ಕಾಣಲಿದ್ದು, ಆ ಬಗ್ಗೆ ಕಾಂಗ್ರೆಸ್ ನಾಯಕರು ಚಿಂತೆ ಮಾಡುವ ಅಗತ್ಯ ಇಲ್ಲ ಎಂದು ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಡಿ ಅವರು ಬುಧವಾರ ಹೇಳಿದ್ದಾರೆ.
ಇಂದು ಸಂಸತ್ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರೂಡಿ, ಆಗಸ್ಟಾ ಹಗರಣಕ್ಕೆ ಸಂಬಂಧಿಸಿದಂತೆ ಹೊಸ ಹೊಸ ಸತ್ಯಗಳು ಹೊರ ಬರುತ್ತಿದ್ದು, ಆ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ನಾನು ಅವರಿಗೆ ಭರವಸೆ ನೀಡುತ್ತೇನೆ ಮತ್ತು ಆದಷ್ಟು ಬೇಗ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ತರಲಾಗುವುದು ಎಂದರು.
ಇದಕ್ಕು ಮುನ್ನ ಕಾಂಗ್ರೆಸ್ ಹಗರಣ ತನಿಖೆ ಪೂರ್ಣಗೊಳಿಸುವ ಬಗ್ಗೆ ಕೇಂದ್ರ ಸರ್ಕಾರ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.
ಇನ್ನು ತಮ್ಮ ವಿರುದ್ಧ ಬಿಜೆಪಿ ನಾಯಕರು ಮಾಡುತ್ತಿರುವ ಆರೋಪಗಳನ್ನು ತಳ್ಳಿಹಾಕಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ನನ್ನ ವಿರುದ್ಧದ ಎಲ್ಲ ಆರೋಪಗಳು ಸುಳ್ಳಾಗಿದ್ದು, ತನಿಖೆಯಿಂದ ಸತ್ಯಾಂಶ ಹೊರ ಬೀಳಲಿದೆ ಎಂದಿದ್ದರು.
ಇಂದು ರಾಜ್ಯಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ದ ಬಿಜೆಪಿಯ ಸುಬ್ರಮಣಿಯನ್ ಸ್ವಾಮಿ ಅವರು, ವಿವಿಐಪಿ ಹೆಲಿಕಾಪ್ಟರ್ ಹಗರಣದಲ್ಲಿ ಸೋನಿಯಾ ಗಾಂಧಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಸೋನಿಯಾ, ಆಗಸ್ಟಾ ವೆಸ್ಟ್ ಲ್ಯಾಂಡ್ ಖರೀದಿ ಹಗರಣದ ಕುರಿತಂತೆ ಕಳೆದ 2 ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸಿದ್ದರು. ಅಲ್ಲದೇ ತನಿಖೆಯನ್ನು ಕೂಡಲೇ ನಿಷ್ಪಕ್ಷಪಾತವಾಗಿ ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದರು.
SCROLL FOR NEXT