ನವದೆಹಲಿ: ವಿವಿಐಪಿ ಹೆಲಿಕಾಫ್ಟರ್ ಹಗರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿಯನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.
ನರೇಂದ್ರ ಮೋದಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿಯನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ರಣ್ ದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ. ಸಿಬಿಐ ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದರೂ ಸಹ ವಿವಿಐಪಿ ಹೆಲಿಕಾಫ್ಟರ್ ಹಗರಣದಲ್ಲಿ ಭಾಗಿಯಾಗಿರುವ ಅಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿಯನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಏಕೆ ರಕ್ಷಿಸುತ್ತಿದೆ ಎಂದು ರಣ್ ದೀಪ್ ಸುರ್ಜೇವಾಲಾ ಪ್ರಶ್ನಿಸಿದ್ದಾರೆ.
ವಾಸ್ತವದಲ್ಲಿ ಕಳೆದ ಎರಡು ವರ್ಷಗಳಿಂದ ಆಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿಯನ್ನು ರಕ್ಷಿಸುತ್ತಿರುವವರು ಯಾರಾದರೂ ಇದ್ದರೆ ಅದು ಪ್ರಧಾನಿ ನರೇಂದ್ರ ಮೋದಿ ಮಾತ್ರ ಎಂದು ಸುರ್ಜೇವಾಲ ಆರೋಪಿಸಿದ್ದಾರೆ. 2015 ರ ಅಕ್ಟೋಬರ್ ನಲ್ಲಿ ಪ್ರಧಾನಿ ಮೋದಿ ಸರ್ಕಾರ ಟಾಟಾ ಹಾಗೂ ಅಗಸ್ಟಾ ವೆಸ್ಟ್ ಲ್ಯಾಂಡ್ ನ ಪಾಲುದಾರಿಕೆಯ ರೋಟೋಕ್ರಾಫ್ಟ್ ಸಂಸ್ಥೆಗೆ ವಿದೇಶಿ ಬಂಡವಾಳ ಉತ್ತೇಜನ ಮಂಡಳಿಯ ಎಫ್ಐಪಿಬಿಯ ಅನುಮತಿ ನೀಡಿತ್ತು ಈ ಬಗ್ಗೆ ರಕ್ಷಣಾ ಸಚಿವರು ಉತ್ತರಿಸುತ್ತಾರಾ ಎಂದು ಸುರೇಜಾವಾಲ ಪ್ರಶ್ನಿಸಿದ್ದಾರೆ.